ತಮಿಳುನಾಡಿಗೆ ಕಾವೇರಿ ನೀರು ಬಿಡದೇ ಇರಲು ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿದ್ದು, ನೀರು ಬಿಡುಗಡೆ ಮಾಡುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಜುಲೈ ಅಂತ್ಯದವರೆಗೆ ತಮಿಳುನಾಡಿಗೆ 1 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಚರ್ಚೆ ನಡೆದಿದೆ ಎನ್ನಲಾಗಿದೆ.
ಸಭೆಯಲ್ಲಿ ಪ್ರತಿಪಕ್ಷ ನಾಯಕರು ಹಾಗೂ ವಿವಿಧ ಪಕ್ಷಗಳ ಮುಖಂಡರು ಸದ್ಯಕ್ಕೆ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಪತ್ರ ನೀಡಿದರು.
ಕಳೆದ ವರ್ಷ ಭೀಕರ ಬರಗಾಲದ ಪರಿಸ್ಥಿತಿ ಇತ್ತು. ಈ ಬಾರಿ ಉತ್ತಮ ಮಳೆಯಾಗುತ್ತಿದ್ದರೂ ಮುಂಗಾರು ಮಳೆಯ ಕೊರತೆ ಇದೆ. ಕಾವೇರಿ ಜಲನಯನ ಪ್ರದೇಶದ ಡ್ಯಾಂಗಳು ಇನ್ನೂ ಅರ್ಧದಷ್ಟೂ ಭರ್ತಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಬಿಡಲು ಸಾಧ್ಯವಿಲ್ಲ ಎಂದು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸುವ ಸಾಧ್ಯತೆ ಇದೆ ಎನ್ನಲಾಗಿದೆ.