ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸಮಗ್ರ ಬದಲಾವಣೆಗೆ ಹೈಕಮಾಂಡ್ ಮುಂದಾಗಿದೆ.
2019ರ ಲೋಕಸಭಾ ಚುನಾವಣೆಯಲ್ಲಿ 69 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ 33 ಸ್ಥಾನಗಳಿಗೆ ಕುಸಿದಿತ್ತು. ಇದರಿಂದ ಬಿಜೆಪಿ ಕೇಂದ್ರದಲ್ಲಿ ಬಹುಮತ ಪಡೆಯಲು ವಿಫಲವಾಗಿತ್ತು. ಆದರೂ ಮೈತ್ರಿಪಕ್ಷಗಳ ಸಹಾಯದಿಂದ ಕೇಂದ್ರದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿತ್ತು.
ಲೋಕಸಭಾ ಚುನಾವಣೆ ನಡೆದ ಒಂದು ತಿಂಗಳು ಕಳೆಯುತ್ತಿದ್ದಂತೆ ಉತ್ತರ ಪ್ರದೇಶದ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟೊಗಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಭುಪೇಂದ್ರ ಚೌಧರಿ ಅವರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ. ಮೂಲಗಳ ಪ್ರಕಾರ ಪ್ರಧಾನಿ ಮೋದಿ ಭೇಟಿ ನೀಡಿದ ನಂತರ ಭುಪೇಂದ್ರ ಚೌಧರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧವೂ ಸಾಕಷ್ಟು ಅಸಮಾಧಾನ ಉಂಟಾಗಿದ್ದು, ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಕೂಡ ದೆಹಲಿಗೆ ಆಗಮಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ನೀಡಿ ಪರಿಸ್ಥಿತಿ ವಿವರಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಭುಪೇಂದ್ರ ಚೌಧರಿ ಜಾಟ್ ಸಮುದಾಯಕ್ಕೆ ಸೇರಿದವರಾಗಿದ್ದು, ಅವರ ಸಮುದಾಯದಲ್ಲೇ ಬಿರುಕು ಇದೆ. ಅಲ್ಲದೇ ಇವರ ನೇಮಕದಿಂದ ಹಿಂದುಳಿದ ವರ್ಗಗಳು ಅಸಮಾಧಾನಗೊಂಡಿದ್ದರಿಂದ ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಉಂಟಾಗಿದೆ ಎಂದು ಹೇಳಲಾಗಿದೆ.
ಉತ್ತರಪ್ರದೇಶದಲ್ಲಿ ಬಿಜೆಪಿಯ ಒಳಬೇಗುದಿ ಹೊರಗೆ ಬರುತ್ತಿದ್ದಂತೆ ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ಕಾರ್ಯೊನ್ಮುಖರಾಗಿದ್ದು, ಮುಖಂಡರನ್ನು ದೆಹಲಿಗೆ ಕರೆಸಿ ಮಾತುಕತೆ ನಡೆಸಿದೆ. ಅಲ್ಲದೇ ಪಕ್ಷದ ಸಂಘಟನೆಯಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ಬಯಸಿದ್ದು, ಭುಪೇಂದ್ರ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.