ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಬುಧವಾರ ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಠಾಣೆ ಮುಂದೆ ಗುಂಪುಗೂಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಪುನೀತ್ ಕೆರೆಹಳ್ಳಿ ಎ1, ಪ್ರತಾಪ್ ಸಿಂಹ ಎ2 ಆರೋಪಿಗಳು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ಸುದ್ದಿ ಹಬ್ಬಿಸಿದ್ದೂ ಅಲ್ಲದೇ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದರು. ಮಂಗಳವಾರ ಬೆಳಿಗ್ಗೆ ಜಾಮೀನಿನ ಮೇಲೆ ಬಿಡುಗಡೆ ಆಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಜೊತೆ ಆಗಮಿಸಿ ಪೊಲೀಸರು ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಮಾಧ್ಯಮಗಳ ಮುಂದೆ ಆರೋಪಿಸಿದರು.
ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.
ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೂರು ನೀಡಿದ್ದೂ ಅಲ್ಲದೇ ಪ್ರತಿಭಟನೆ ನಡೆಸುವ ಮೂಲಕ ಒತ್ತಡ ಹೇರಲು ಪ್ರಯತ್ನಿಸಿದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಮೇಲೆ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.