ಭಕ್ತರದ ದಟ್ಟಣೆಯನ್ನು ನಿಯಂತ್ರಿಸಲು ಸ್ವಯಂಸೇವಕರು ಲಾಠಿ ಪ್ರಹಾರ ನಡೆಸಿದ್ದರಿಂದ ಉಂಟಾದ ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಸೇರಿದಂತೆ 7 ಮಂದಿ ಮೃತಪಟ್ಟ ಘಟನೆ ಬಿಹಾರದಲ್ಲಿ ಸಂಭವಿಸಿದೆ.
ಜೆಹಾನ್ ಬಾದ್ ನ ಬಾರ್ವರ್ ಬೆಟ್ಟದ ಬಾಬಾ ಸಿದ್ದೇಶ್ವರ್ ನಾಥ್ ದೇವಸ್ಥಾನಕ್ಕೆ ಶ್ರಾವಣ ಮಾಸದ ಪ್ರಯುಕ್ತ ಪ್ರತಿವರ್ಷದಂತೆ ಈ ವರ್ಷವೂ ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದರು.
ಅಪಾರ ಸಂಖ್ಯೆಯಲ್ಲಿ ಭಕ್ತರನ್ನು ನಿಯಂತ್ರಿಸಲು ದೇವಸ್ಥಾನದ ಸ್ವಯಂ ಸೇವಕರು ಬಲವಂತದ ಪ್ರಯೋಗ ಮಾಡಿದ್ದರಿಂದ ಕಾಲ್ತುಳಿತ ಸಂಭವಿಸಿದ್ದು, 35 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಶ್ರಾವಣ ಮಾಸದಲ್ಲಿ ಪ್ರತಿ ವರ್ಷ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜನರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು. ಇದುವರೆಗೆ 7 ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ದೇವಸ್ಥಾನದಲ್ಲಿ ಸೂಕ್ತ ವ್ಯವಸ್ಥೆ ಇರಲಿಲ್ಲ. ಸ್ವಯಂ ಸೇವಕರು ಭಕ್ತರನ್ನು ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ್ದೇ ಘಟನೆಗೆ ಮೂಲ ಕಾರಣ ಎಂದು ತಿಳಿದು ಬಂದಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.