ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯ ಮಾಡಿದ್ದಾರೆ. ಅವರು ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೇಲಿನ ತನಿಖೆಗಾಗಿ ರಾಜ್ಯಪಾಲರು ಅನುಮತಿ ನೀಡಲು ಲೋಕಾಯುಕ್ತದವರು ಮನವಿ ಮಾಡಿದ್ದಾರೆ. ಇನ್ನೂ ಯಾಕೆ ಅನುಮತಿ ನೀಡಿಲ್ಲ ಎಂದು ಪ್ರಶ್ನಿಸಿದರು.
ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ನಲ್ಲಿ ನಡೆದ ಗಣಿಗಾರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಲೋಕಾಯುಕ್ತದವರು 23-11-2023 ರಂದು ಅನುಮತಿ ಕೋರಿದ್ದು, ಆ ಬಗ್ಗೆ ರಾಜ್ಯಪಾಲರು ಯಾವುದೇ ನಿರ್ಣಯ ಕೈಗೊಳ್ಳದ ಕಾರಣ ಲೋಕಾಯುಕ್ತ ಮತ್ತೊಮ್ಮೆ ಕೋರಿದ್ದಾರೆ. ಆದರೆ 26-07-2024 ರಂದು ಅಬ್ರಾಹಂ ರವರು ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ ತಕ್ಷಣ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು, ಇಂತಹ ತಾರತಮ್ಯವೇಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ರಾಜ್ಯಪಾಲರನ್ನು ಟೀಕಿಸಿದ್ದಕ್ಕೆ ಬಿಜೆಪಿಯವರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಶಶಿಕಲಾ ಜೊಲ್ಲೆ, ಹೆಚ್.ಡಿ. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಮೇಲಿರುವ ಆರೋಪಗಳಿಗೆ ಇದುವರೆಗೆ ತನಿಖೆಗೆ ಆದೇಶಿಸಿಲ್ಲ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾಗಿದ್ದು, ಅವರ ಮೇಲೆ ಗೌರವವಿದೆ. ಆದರೆ ರಾಜ್ಯಪಾಲರು ತಾರತಮ್ಯ ಧೋರಣೆ ಅನುಸರಿಸಬಾರದು ಎಂದರು.