ಕುಶಾಲನಗರ: ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ಕಬ್ಬಿಣದ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 4 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.
ಮೃತ ಬಾಲಕಿಯನ್ನು ಅಪೂರ್ವ ಎಂದು ಗುರುತಿಸಲಾಗಿದೆ. ಆಕೆ ಸತೀಶ್ ಮತ್ತು ಪವಿತ್ರ ದಂಪತಿಗಳ ಪುತ್ರಿಯಾಗಿದ್ದಾರೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಧಾವಿಸಿ ರಕ್ಷಿಸಲು ಯತ್ನಿಸಿದರೂ ಬಾಲಕಿಯ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಈ ದುರ್ಘಟನೆಯಿಂದ ಬಸವನಹಳ್ಳಿ ಹಾಡಿಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಮುಖ್ಯೋಪಾಧ್ಯಾಯರ ವಿರುದ್ಧ ನಿರ್ಲಕ್ಷ್ಯದ ಆರೋಪ: ಗೇಟ್ ರಿಪೇರಿ ಮಾಡಿಸಬೇಕು ಎಂದು ಹಲವು ಬಾರಿ ಎಸ್‌ಡಿಎಂಸಿ ಸದಸ್ಯರು ಮುಖ್ಯೋಪಾಧ್ಯಾಯರ ಗಮನಕ್ಕೆ ತಂದಿದ್ದರು. ಆದರೆ ಅವರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ಮತ್ತು ಪೋಷಕರು ಆರೋಪಿಸಿದ್ದಾರೆ.
ಶಾಲಾ ಆವರಣದ ಸುರಕ್ಷತೆಯಲ್ಲಿ ಲೋಪವಾಗಿರುವುದರಿಂದಲೇ ಈ ಅನಾಹುತ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.



