ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಖ್ಯಾತ ನಟ ಚಿಕ್ಕಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ನಟ ದರ್ಶನ್, ಪವಿತ್ರಾ ಗೌಡ ಬಂಧಿಸಿ ವಿಚಾರಣೆ ನಡೆಸುತ್ತಿರುವ ಪೊಲೀಸರು ಇದೀಗ ರೇಣುಕಾ ಸ್ವಾಮಿ ಕೊಲೆಯಾದ ದಿನ ನಡೆದ ಪಾರ್ಟಿಯಲ್ಲಿ ಚಿಕ್ಕಣ್ಣ ಇದ್ದರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜೂನ್ 8 ಶನಿವಾರ ರೇಣುಕಾಸ್ವಾಮಿ ಕೊಲೆಯಾಗಿದ್ದು, ಅದೇ ದಿನ ದರ್ಶನ್ ಮತ್ತು ಗ್ಯಾಂಗ್ ಸದಸ್ಯರು ರಾಜರಾಜೇಶ್ವರಿ ನಗರದ ಸ್ಟೋನಿಬ್ರೂಕ್ ಪಬ್ನಲ್ಲಿ ಮಧ್ಯಾಹ್ನದಿಂದ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ಚಿಕ್ಕಣ್ಣ ಭಾಗಿಯಾಗಿದ್ದರು ಎಂದು ಹೇಳಲಾಗಿದೆ.
ಸಂಜೆ ವೇಳೆಗೆ ಸ್ವಲ್ಪ ಕೆಲಸವಿದೆ ಎಂದು ಹೇಳಿ ದರ್ಶನ್ ಹೊರಟಿದ್ದರು. ರೇಣುಕಾಸ್ವಾಮಿ ಕೊಲೆಯಾದ ದಿನವೇ ದರ್ಶನ್ ಜೊತೆ ಪಾರ್ಟಿ ಮಾಡಿದ್ದರಿಂದ ಪೊಲೀಸರು ಈಗ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಉಲ್ಲೇಖಿಸಿದ್ದಾರೆ.
ಕೊಲೆ ವಿಚಾರವಾಗಿ ಪಬ್ನಲ್ಲಿ ಏನಾದರೂ ಚರ್ಚೆ ನಡೆದಿತ್ತಾ ಎಂಬುದರ ಬಗ್ಗೆ ಮಾಹಿತಿ ಪಡೆಯುವ ಸಾಧ್ಯತೆಯಿದೆ. ಈಗ ನೋಟಿಸ್ ಕೊಟ್ಟು ಕರೆಸಬೇಕೇ? ಬೇಡವೇ ಎಂಬುದರ ಬಗ್ಗೆ ಪೊಲೀಸರು ಹಿರಿಯ ಅಧಿಕಾರಿಗಳ ಸಲಹೆ ಕೇಳಿದ್ದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.