ನವದೆಹಲಿ: ರಾಜ್ಯದ ನೀರಾವರಿ ಯೋಜನೆಗಳಿಗೆ ಇರುವ ಅಡೆತಡೆಗಳನ್ನು ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಸರ್ವಪಕ್ಷ ನಿಯೋಗದಿಂದ ಮನವಿ ಮಾಡಲು ಸಂಸದರ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆಯಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬೇಡಿಕೆಗಳ ಕುರಿತು ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡುವ ಕುರಿತು ತೀರ್ಮಾನಿಸಲಾಯಿತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿದ್ದು, ಕೇಂದ್ರ ಸರ್ಕಾರದ ಸಹಕಾರ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಕೇಂದ್ರ ಸರಕಾರ ಈಗಾಗಲೇ ಎತ್ತಿನಹೊಳೆ ಯೋಜನೆಗೆ ಅನುಮತಿ ನೀಡಿದ್ದು, ಕೆಲಸಗಳು ನಡೆಯುತ್ತಿದೆ. ಇದೇ ರೀತಿ ಮಹದಾಯಿ, ಮೇಕೆದಾಟು, ಕೃಷ್ಣಾ ಮೇಲ್ದಂಡೆ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳ ಕುರಿತು ಚರ್ಚಿಸಲಾಯಿತು.
ಬಿಜೆಪಿ ಸಂಸದರು ಸಭೆಯಲ್ಲಿ ಪಾಲ್ಗೊಂಡಿದ್ದು, ಮತ್ತೊಂದು ಸಭೆಯ ಕಾರಣ ಅವರು ತೆರಳಿದ್ದು, ಅವರ ಸಮಯ ನೋಡಿಕೊಂಡು ಮತ್ತೊಂದು ಸಭೆ ಕರೆದು ಪ್ರಧಾನಿ ಭೇಟಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಸಮಯ ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು.
ಪ್ರಹ್ಲಾದ್ ಜೋಷಿ, ಹೆಚ್.ಡಿ. ಕುಮಾರಸ್ವಾಮಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಸೇರಿದಂತೆ ಕೇಂದ್ರದ ಸಚಿವರು ಅಧಿವೇಶನದಲ್ಲಿ ಬ್ಯೂಸಿ ಆಗಿರುವುದಿಂದ ಸಭೆಗೆ ಬಂದಿರಲಿಲ್ಲ. ಅವರ ಬಿಡುವಿನ ಸಮಯ ನೋಡಿಕೊಂಡು ಮತ್ತೊಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಇದಕ್ಕೂ ಮುನ್ನ ರಾಜ್ಯ ಸಂಸದರ ಜೊತೆಗೂಡಿ ವಕೀಲರ ಜೊತೆ ಮಾತುಕತೆ ನಡೆಸಿ ಕಾನೂನು ಹೋರಾಟದ ಕುರಿತು ಸಲಹೆ ಪಡೆಯಲಾಯಿತು.



