ಮುಡಾ ಸೈಟ್ ಹಂಚಿಕೆ ಅಕ್ರಮದಲ್ಲಿ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ಸಿಎಂ ಸಿದ್ದರಾಮಯ್ಯ ಎ1 ಮತ್ತು ಪತ್ನಿ ಪಾರ್ವತಿ ಎ2 ಆರೋಪಿ ಎಂದು ಆರೋಪಿಸಲಾಗಿದೆ.
ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಆದೇಶ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ತನಿಖೆಗೆ ಅನುಮತಿ ನೀಡಿತ್ತು. ಇದರ ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯ 6 ವಾರಗಳಲ್ಲಿ ವರದಿ ನೀಡುವಂತೆ ಸೂಚಿಸಿ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿತ್ತು.
ನ್ಯಾಯಾಲಯದ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಟಿ.ಜೆ. ಉಮೇಶ್ ಶನಿವಾರ ಎಫ್ ಐಆರ್ ದಾಖಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪತ್ನಿ ಬಿಎಂ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಹಲವು ಸೆಕ್ಷನ್ ಗಳಡಿ ಎಫ್ ಐಆರ್ ದಾಖಲಿಸಿದ್ದಾರೆ.
ಪಾರ್ವತಿ ಸಂಬಂಧಿ ಮಲ್ಲಿಕಾರ್ಜುನ ಮತ್ತು ದೇವರಾಜು ಎ3 ಮತ್ತು ಎ4 ಆರೋಪಿಯಾಗಿ ಎಫ್ ಐಆರ್ ದಾಖಲಿಸಲಾಗಿದ್ದು, ಈ ಸಂಬಂಧ ವಿಚಾರಣೆ ಆರಂಭಗೊಳ್ಳಬೇಕಿದ್ದು, ಡಿಸೆಂಬರ್ 24ರೊಳಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದೆ.
ಸಿದ್ದರಾಮಯ್ಯ ಮತ್ತು ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿರುವ ಎಫ್ ಐಆರ್ ನಲ್ಲಿ ಹಲವು ಸೆಕ್ಷನ್ ಗಳನ್ನು ದಾಖಲಿಸಲಾಗಿದ್ದು, ಇವು ಜಾಮೀನು ರಹಿತ ವಾರೆಂಟ್ ಜಾರಿ ಮಾಡಬಹುದಾಗಿದೆ.