ಬಾಗಲಕೋಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣ 625 ಅಂಕ ಪಡೆದು ರಾಜ್ಯದಲ್ಲೇ ಮೊದಲ ಸ್ಥಾನ ಪಡೆದ ಗೌರವಕ್ಕೆ ಪಾತ್ರರಾಗಿದ್ದಾಳೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಮುಧೋಳ ತಾಲೂಕಿನ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ 625ಕ್ಕೆ 625 ಅಂಕಗಳನ್ನು ಪಡೆದ ಏಕೈಕ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಅಂಕಿತಾ ಪಾತ್ರರಾಗಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಒಟ್ಟು ಶೇ.73.40ರಷ್ಟು ಫಲಿತಾಂಶ ಬಂದಿದ್ದು, ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಪರೀಕ್ಷೆಯಲ್ಲಿ ಒಟ್ಟು 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉಡುಪಿ 94% ಫಲಿತಾಂಶ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದಿದ್ದು, 92% ಫಲಿತಾಂಶ ಪಡೆದು ದಕ್ಷಿಣ ಕನ್ನಡ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಮೂರನೇ ಸ್ಥಾನವನ್ನು ಶಿವಮೊಗ್ಗ ದಕ್ಕಿಸಿಕೊಂಡಿದ್ದು, ಯಾದಗಿರಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಫಲಿತಾಂಶ ಪ್ರಕಟಿಸಿದ್ದಾರೆ.