ಬೆಂಗಳೂರು: ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ವಾರ್ಷಿಕ ಆದಾಯ ಮಿತಿಯನ್ನು 32,000ದಿಂದ 1,20,000 ರೂ.ಗೆ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ, ವಿವಿಧ ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ 32 ಸಾವಿರ ರೂ. ಆದಾಯ ಮಿತಿ ಇತ್ತು. ಇದೀಗ ₹1,20,000 ಗಳಿಗೆ ಏರಿಕೆ ಮಾಡುವ ಮೂಲಕ ಬಹುಕಾಲದ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಎಂದರು.
ಫಲಾನುಭವಿಗಳ ದಾಖಲೆ ಪರಿಶೀಲನೆ
ರಾಜ್ಯದಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿ ಸಂಯೋಜಿಸಿದಾಗ 23,14,544 ಫಲಾನುಭವಿಗಳು ಸಂದೇಹಾಸ್ಪದ ಎಂದು ಕಂಡುಬಂದಿದ್ದು, ಈ ಫಲಾನುಭವಿಗಳ ಭೌತಿಕ ಪರಿಶೀಲನೆಗಾಗಿ ಸಂಯೋಜನೆ ಮೊಬೈಲ್ ಆ್ಯಪ್ ಸಿದ್ಧಪಡಿಸಿ ಪರಿಶೀಲನೆ ನಡೆಸಲಾಗಿತ್ತು. ಈ ಸಮಯದಲ್ಲಿ ದಾಖಲಾತಿಗಳನ್ನು ಹಾಜರುಪಡಿಸದ, ನೀಡಿದ ವಿಳಾಸದಲ್ಲಿ ವಾಸವಿಲ್ಲದಿದ್ದ ಮತ್ತು ಆದಾಯ ದೃಢೀಕರಣ ಪತ್ರ ಹಾಜರುಪಡಿಸದಿದ್ದ 18,06,032 ಮಂದಿಯ ಪಿಂಚಣಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಕೆಲವು ಸಂದೇಹಾಸ್ಪದ ಫಲಾನುಭವಿಗಳು ಪತ್ತೆಯಾಗಿದ್ದಾರೆ: ಗ್ರಾಮ ಆಡಳಿತ ಅಧಿಕಾರಿಗಳು ಸಂಯೋಜನೆ ಮೊಬೈಲ್ ಆ್ಯಪ್ ಮೂಲಕ ಪರಿಶೀಲಿಸಿದ ನಂತರ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಂದ ನಿಯಮಾನುಸಾರ ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ನೀಡಲು ನಿರ್ದೇಶನ ನೀಡಲಾಗಿದೆ. ಆದರೆ, 23,14,544 ಸಂದೇಹಾಸ್ಪದ ಫಲಾನುಭವಿಗಳ ಭೌತಿಕ ಪರಿಶೀಲನೆ ಸಮಯದಲ್ಲಿ ಆದಾಯವು ₹1,20 ಸಾವಿರಕ್ಕಿಂತ ಹೆಚ್ಚಿರುವುದು ಕಂಡುಬಂದಿದೆ.
23,14,544 ಮಂದಿಯ ಪೈಕಿ ₹32,000ಕ್ಕಿಂತ ಹೆಚ್ಚು ಹಾಗೂ ₹1,20,000ಕ್ಕಿಂತ ಕಡಿಮೆ ವಾರ್ಷಿಕ ಆದಾಯ ಇರುವಂತಹ ಫಲಾನುಭವಿಗಳ ಪಿಂಚಣಿಯನ್ನು ಮುಂದುವರೆಸುವಂತೆ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಸೂಚಿಸಿದ್ದರು.
ಅದರಂತೆ 23,14,544 ಮಂದಿಯ ಪೈಕಿ ಪರಿಶೀಲನೆಯ ನಂತರ ₹32,000ಕ್ಕಿಂತ ಹೆಚ್ಚು ಹಾಗೂ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿಯನ್ನು ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರಿಸಲು ಕಂದಾಯ ಇಲಾಖೆಯು ಆದೇಶಿಸಿದೆ.



