ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರನ್ನು ಹೈಕಮಾಂಡ್ ದಿಢೀರನೆ ದೆಹಲಿಗೆ ಕರೆಸಿಕೊಂಡಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಚುರುಕುಗೊಂದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಿ ಮರಳಿದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಹಲವು ಮಹತ್ವದ ಬದಲಾವಣೆಗಳು ಆಗುವ ಸಾಧ್ಯತೆ ಇದೆ.
ಹೈಕಮಾಂಡ್ ಸೂಚನೆ ಮೇರೆಗೆ ಬುಧವಾರ ಬೆಳಿಗ್ಗೆ ದಿಢೀರನೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ದೆಹಲಿಗೆ ತೆರಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಗಮನಾರ್ಹ. ಉಭಯ ನಾಯಕರ ಭೇಟಿಯ ನಿಖರ ಕಾರಣ ಇನ್ನೂ ಸ್ಪಷ್ಟಪಡಿಸಲಾಗಿಲ್ಲ. ಆದರೆ, ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷರ ನೇಮಕಾತಿ ಕುರಿತು ಶೀಘ್ರದಲ್ಲೇ ತೀರ್ಮಾನವನ್ನು ಪ್ರಕಟಿಸಬಹುದು ಎಂಬ ನಿರೀಕ್ಷಿಸಲಾಗಿದೆ.
ಇತ್ತೀಚೆಗೆ ಬಿಜೆಪಿ ಅತೃಪ್ತರ ಬಣ ಸಭೆ ನಡೆಸಿದ್ದು, ಇದರಲ್ಲಿ ಕೇಂದ್ರ ಸಚಿವ ಸೋಮಣ್ಣ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು. ಜಿಲ್ಲಾಧ್ಯಕ್ಷ ನೇಮಕದಲ್ಲಿ ಉಂಟಾದ ಅಸಮಾಧಾನ ಕೂಡ ಕೆಲವರನ್ನು ಕೆರಳಿಸಿದೆ ಎಂದು ಹೇಳಲಾಗಿದೆ.
ಆರ್ ಅಶೋಕ್ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿಗೆ ತೆರಳಿದ್ದಾರೆ ಎನ್ನಲಾಗಿದೆ. ಆದರೆ, ಮತ್ತೊಂದು ಮೂಲಗಳ ಪ್ರಕಾರ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ. ಇದೇ ವೇಳೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೂ ಅಶೋಕ್ ಮಾತುಕತೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಮತ್ತೊಂದೆಡೆ, ಕಳೆದ 15 ದಿನಗಳಲ್ಲಿ ರಾಜ್ಯದಲ್ಲಿ ನಡೆದ ಬೆಳವಣಿಗೆಗಳು ಮತ್ತು ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸುವ ಪ್ರಯತ್ನದ ಭಾಗವಾಗಿ ಈ ಭೇಟಿ ನಡೆದಿರಬಹುದು ಎಂದೂ ಹೇಳಲಾಗುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕ ಇಬ್ಬರನ್ನೂ ಬಿಜೆಪಿ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿದೆಯೇ ಅಥವಾ ಇವರಾಗಿಯೇ ಹೈಕಮಾಂಡ್ ಭೇಟಿ ಮಾಡಲು ತೆರಳಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಇಬ್ಬರೂ ಪ್ರತ್ಯೇಕವಾಗಿ ತೆರಳಿರುವುದು ನಿಜ. ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಕುರಿತಾಗಿ ಹೈಕಮಾಂಡ್ ತೀರ್ಮಾನ ಘೋಷಿಸಬಹುದು ಎಂಬ ನಿರೀಕ್ಷೆಯೂ ಇದೆ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನದ ಕುರಿತಾದ ಚರ್ಚೆಗಾಗಿಯೇ ಉಭಯ ನಾಯಕರು ದೆಹಲಿಗೆ ತೆರಳಿರಬಹುದು ಎನ್ನಲಾಗುತ್ತಿದೆ.



