ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಹೆಚ್ಚಾಗುತ್ತಿರುವ ನಡುವೆಯೇ ಡೆಂಘೇ ಜ್ವರದ ಹಾವಳಿ ಕೂಡ ಹೆಚ್ಚಾಗುತ್ತಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ರಾಜ್ಯಾದ್ಯಂತ ಒಟ್ಟಾರೆ 4364 ಪ್ರಕರಣಗಳು ಪತ್ತೆಯಾಗಿವೆ. ಪ್ರತಿ ದಿನ 2 ಡೆಂಘೇ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾಂಕ್ರಾಮಿಕ ಕಾಯಿಲೆ ಹರಡದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಜೂನ್ ತಿಂಗಳಲ್ಲಿ 1742 ಡೇಂಘೇ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ.
ಎರಡನೇ ಸ್ಥಾನದಲ್ಲಿ 491 ಪ್ರಕರಣ ದಾಖಲಾಗಿರುವ ಚಿಕ್ಕಮಗಳೂರು ಇದೆ. ಮೈಸೂರಿನಲ್ಲಿ 431 ಪ್ರಕರಣಗಳು ದಾಖಲಾಗಿದೆ. ಉಳಿದಂತೆ ಮಂಡ್ಯ, ರಾಮನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೂಡ ಡೇಂಘೇ ಜ್ವರ ಕಾಣಿಸಿಕೊಂಡಿದೆ.
ಗರ್ಭಿಣಿಯರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಸೊಳ್ಳೆಗಳಿಂದ ಹರಡುವ ಈ ಕಾಯಿಲೆ ತಡೆಗಟ್ಟಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ‍್ಳಬೇಕು ಎಂದು ಇಲಾಖೆ ಸುತ್ತೋಲೆ ಹೊರಡಿಸಿದೆ.