ಡಿವೈಡರ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಹಾರಿದ ಕಾರು ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.
ಬೆಂಗಳೂರು ಹೊರವಲಯದ ಬೆಂಗಳೂರು-ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ದೇವನಹಳ್ಳಿ ರಾಣಿ ಕ್ರಾಸ್ ಬಳಿ ಗುರುವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದ ನಿವಾಸಿಗಳಾದ ಸುಮನ್ (25), ಸಾಗರ್ (26) ಮತ್ತು ಮೋಹನ್ (33) ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರದ ಕಡೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರೊಂದು ಡಿವೈಡರ್ ಜಂಪ್ ಮಾಡಿ ಎದುರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟರೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ವೈದ್ಯಕೀಯ ವಿಶ್ವವಿದ್ಯಾಲಯದ ಆಸ್ಪತ್ರೆಗೆ ರವಾನಿಸಲಾಗಿದೆ.
ಅತಿ ವೇಗವಾಗಿ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರು ಹಠಾತ್ತನೆ ನಿಯಂತ್ರಣ ಕಳೆದುಕೊಂಡು ಕಾಂಕ್ರೀಟ್ ಡಿವೈಡರ್‌ಗೆ ಹಾರಿ ಕೆಎಸ್‌ಆರ್‌ಟಿಸಿ ಬಸ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಬಸ್ಸಿನ ಮುಂಭಾಗ ಹಾನಿಗೊಂಡಿದೆ.
ದೇವನಹಳ್ಳಿ ಸಂಚಾರಿ ಪೊಲೀಸರು ಅಪಘಾತದ ಕುರಿತು ತನಿಖೆ ನಡೆಸುತ್ತಿದ್ದಾರೆ. ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿದ್ದಾರೆ.


