ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಎಂಬ ಕುತೂಹಲ ಹೆಚ್ಚಾಗುತ್ತಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಸುಮಲತಾ ಅಂಬರೀಷ್ ಮತ್ತು ಚಕ್ರವರ್ತಿ ಸೂಲಿಬೆಲೆ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ದೊರೆಯುವ ನಿರೀಕ್ಷೆ ಇದೆ.
ಬಿಜೆಪಿ ಮತ್ತು ಜೆಡಿಎಸ್ ಲೋಕಸಭಾ ಚುನಾವಣೆಗೆ ಜೊತೆಯಾಗಿ ಹೋರಾಟ ನಡೆಸಲಿದ್ದು, ಜೆಡಿಎಸ್ ಮಂಡ್ಯ, ಹಾಸನ ಮತ್ತು ಕೋಲಾರದಿಂದ ಸ್ಪರ್ಧಿಸಲಿದೆ. ಇದರಿಂದ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಜೆಡಿಎಸ್ ಹಿಂದೆ ಸರಿದಿದೆ. ಇದರಿಂದ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯುವುದು ದೃಢಪಟ್ಟಂತಾಗಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಹಿಂದಿನಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಕಳೆದ ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಬಿಜೆಪಿಯಿಂದ ಬಿಎನ್ ಬಚ್ಚೇಗೌಡ ಗೆದ್ದು ಬಂದಿದ್ದರು. ಇದೀಗ ಬಿಎನ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿರುವುದರಿಂದ ಬಿಜೆಪಿ ಮತ್ತು ಜೆಡಿಎಸ್ ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿತ್ತು.
ಇದೀಗ ಮಂಡ್ಯದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ಅಂಬರೀಷ್ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಚಿಕ್ಕಬಳ‍್ಳಾಪುರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡುವುದಾಗಿ ಬಿಜೆಪಿ ಕೇಳಿತ್ತು. ಆದರೆ ಸುಮಲತಾ ಈ ಪ್ರಸ್ತಾಪವನ್ನು ನಿರಾಕರಿಸಿದ್ದರಿಂದ ಬಿಜೆಪಿ ಹೊಸ ಅಭ್ಯರ್ಥಿಯ ಹುಡುಕಾಟ ನಡೆಸಿದೆ.
ಪಕ್ಷದ ಉನ್ನತ ಮೂಲಗಳ ಪ್ರಕಾರ ಚಕ್ರವರ್ತಿ ಸೂಲಿಬೆಲೆ ಹಾಗೂ ವಿವೇಕ್ ರೆಡ್ಡಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆದಿದ್ದು, ಸ್ಥಳೀಯ ಎಂಬ ಕಾರಣಕ್ಕೆ ಚಕ್ರವರ್ತಿ ಸೂಲಿಬೆಲೆಗೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವೇಳೆ ಸುಮಲತಾ ಅವರನ್ನು ಓಲೈಸುವ ಪ್ರಕ್ರಿಯೆ ಮುಂದುವರೆದಿದೆ.