ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಹಾಗೂ ಅಚ್ಚ ಕನ್ನಡದ ಮಾತುಗಾರ್ತಿ ಅಪರ್ಣಾ ವಸ್ತಾರೆ ನಿಧನರಾಗಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಬನಶಂಕರಿಯ ಸ್ವಗೃಹದಲ್ಲಿ ಗುರುವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಪುಟ್ಟಣ ಕಣಗಲ್ ನಿರ್ದೇಶನದ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಅಪರ್ಣಾ ನಂತರ ನಿರೂಪಕಿಯಾಗಿ, ಧಾರವಾಹಿಗಳಲ್ಲಿ ಹಾಗೂ ಟಿವಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು.
ಮೂಡಲ ಮನೆ, ಮುಕ್ತ ಮುಕ್ತ ಮೊದಲಾದ ಧಾರಾವಾಹಿಗಳಲ್ಲೂ ನಟಿಸಿದ್ದ ಅಪರ್ಣಾ, ನಮ್ಮ ಮೆಟ್ರೋ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಧ್ವನಿ ನೀಡಿದ್ದರು.
2013 ರಲ್ಲಿ ಬಿಗ್ ಬಾಸ್ ಶೋ ನಲ್ಲಿಯೂ ಭಾಗವಹಿಸಿದ್ದ ಅಪರ್ಣಾ, ಮಜಾ ಟಾಕೀಸ್ ನಲ್ಲಿ ಕೂಡ ಕಾಣಿಸಿಕೊಂಡಿದ್ದರು. ಯುವ ವಾಸ್ತುಶಿಲ್ಪಿ ಹಾಗೂ ಕವಿ ನಾಗರಾಜ ವಸ್ತಾರೆ ಅವರನ್ನು ವಿವಾಹವಾಗಿದ್ದರು.
90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಅಪರ್ಣ ಕಾರ್ಯ ನಿರ್ವಹಿಸಿದ್ದರು.
ಕನ್ನಡ ದೂರದರ್ಶನದ ಆರಂಭದ ಹಂತದಲ್ಲಿಯೇ ಕಾರ್ಯಕ್ರಮ ನೀಡುತ್ತ ಬಂದಿದ್ದರು. 90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದ್ದಾರೆ. ರೇಡಿಯೋ ಜಾಕಿಯಾಗಿಯೂ ಕೆಲಸ ಮಾಡಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಟಿವಿ ಶೋಗಳನ್ನು ನಡೆಸಿದ್ದಾರೆ. ಜನಪ್ರಿಯ ಧಾರಾವಾಹಿ ‘ಮುಕ್ತ’ದಲ್ಲಿ ಶೀಲಾ ಪ್ರಸಾದ್ ಪಾತ್ರದಲ್ಲಿ ಕಿರುತೆರೆ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು. ಅಂಕಣಗಾರ್ತಿಯಾಗಿಯೂ ಜನಪ್ರಿಯರಾಗಿದ್ದರು.