ಬಿಜೆಪಿಯ ಹಿರಿಯ ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
96 ವರ್ಷದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಡ್ವಾಣಿ ಅವರ ತಪಾಸಣೆ ಮಾಡುತ್ತಿರುವ ಏಮ್ಸ್ ವೈದ್ಯರು ಕಾರಣವನ್ನು ಬಹಿರಂಗಪಡಿಸಿಲ್ಲ.
ಮೂರು ತಿಂಗಳ ಹಿಂದೆಯಷ್ಟೇ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಅಡ್ವಾಣಿ ಅವರಿಗೆ ಪ್ರದಾನ ಮಾಡಲಾಗಿತ್ತು. ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಪ್ರಶಸ್ತಿ ಪ್ರದಾನ ಮಾಡಿದ್ದರು.
2002 ಜೂನ್ ನಿಂದ 2004 ಮೇವರೆಗೆ ಅಡ್ವಾಣಿ ಉಪಪ್ರಧಾನಿ ಪಟ್ಟ ಅಲಂಕರಿಸಿದ್ದರು. 1999ರಿಂದ 2004ರವರೆಗೆ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 1986ರಿಂದ 1990 ಮತ್ತು 1993ರಿಂದ 1998 ಮತ್ತು 2004ರಿಂದ 2005ರವರೆಗೆ ಹಲವಾರು ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.
ದೇಶಾದ್ಯಂತ ರಥಯಾತ್ರೆ ಹಮ್ಮಿಕೊಳ್ಳುವ ಮೂಲಕ ಅಡ್ವಾಣಿ ಬಿಜೆಪಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮುಲು ಕಾರಣರಾಗಿದ್ದರು. ಅಲ್ಲದೇ ಬಿಜೆಪಿ ಮೊದಲ ಬಾರಿ ಅಧಿಕಾರ ಹಿಡಿಯುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಅಡ್ವಾಣಿ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ರಾಮ ಮಂದಿರ ಹೋರಾಟದಲ್ಲಿ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿದ್ದ ಅಡ್ವಾಣಿ, ಇತ್ತೀಚೆಗೆ ನಡೆದ ರಾಮಮಂದಿರ ಉದ್ಘಾಟನೆಗೂ ಆಗಮಿಸಿರಲಿಲ್ಲ.