ಕ್ರೀಡಾಪಟುಗಳ ಜೀವಮಾನದ ಸಾಧನೆ ಗುರುತಿಸಿ ನೀಡಲಾಗುತ್ತಿದ್ದ ಪ್ರತಿಷ್ಠಿತ ಧ್ಯಾನ್ ಚಂದ್ ಪ್ರಶಸ್ತಿಯನ್ನು ಪ್ರಸಕ್ತ ಸಾಲಿನಿಂದಲೇ ನಿಲ್ಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
2002ರಿಂದ ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಸ್ಮರಣಾರ್ಥ ದೇಶದಲ್ಲಿ ವಿವಿಧ ಕ್ರೀಡೆಗಳಲ್ಲಿ ಕ್ರೀಡಾಪಟುಗಳ ಜೀವಮಾನದ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿತ್ತು. ಆದರೆ ಈ ವರ್ಷದಿಂದ ಮೇಜರ್ ಧ್ಯಾನ್ ಚಂದ್ ಹೆಸರಿನಲ್ಲಿ ಪ್ರಶಸ್ತಿ ನೀಡುವುದನ್ನು ನಿಲ್ಲಿಸಲು ಕೇಂದ್ರ ಕ್ರೀಡಾ ಸಚಿವಾಲಯ ತೀರ್ಮಾನಿಸಿದೆ.
ಒಂದು ಕ್ರೀಡೆಯಲ್ಲಿ ಸಾಧಿಸಿದ ವ್ಯಕ್ತಿಯ ಹೆಸರನ್ನು ಇತರೆ ಕ್ರೀಡೆಗಳ ಸಾಧಕರಿಗೆ ನೀಡುವುದು ಸರಿಯಲ್ಲ ಎಂಬ ಕಾರಣಕ್ಕೆ ಮುಂದಿನ ವರ್ಷದಿಂದ ಅರ್ಜುನ ಜೀವಮಾನದ ಸಾಧನೆ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವಾಲಯ ಪ್ರಕಟಿಸಿದೆ.
ಮುಂದಿನ ವರ್ಷದಿಂದ ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಕ್ರೀಡಾಕೂಟ ಸೇರಿದಂತೆ ವಿವಿಧ ಕ್ರೀಡಾಕೂಟಗಳಲ್ಲಿ ಕ್ರೀಡಾಪಟುಗಳ ಸಾಧನೆಯನ್ನು ಗುರುತಿಸಿ ಅರ್ಜುನ ಜೀವಮಾನದ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
2024ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನವಾಗಿದೆ. ಖೇಲೋ ಇಂಡಿಯಾ ಯೋಜನೆಯಡಿ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಹೆಸರಿನಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಕ್ರೀಡಾ ಸಚಿವಾಲಯ ವಿವರಿಸಿದೆ.