ರಾಜ್ಯಪಾಲರು ಸಚಿವ ಸಂಪುಟ ಸಲಹೆಯಂತೆ ಕಾರ್ಯ ನಿರ್ವಹಿಸಬೇಕೇ ಹೊರತು ರಾಜ್ಯ ಸರ್ಕಾರಕ್ಕೆ ಶೋಕಾಸ್ ನೀಡುವುದಲ್ಲ. ಮುಡಾ ಪ್ರಕರಣದಲ್ಲಿ ಶೋಕಾಸ್ ನೋಟಿಸ್ ನೀಡಿರುವುದು ಸಂವಿಧಾನ ವಿರೋಧಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೊಡಗು ಜಿಲ್ಲೆಗೆ ಶುಕ್ರವಾರ ಪ್ರಯಾಣ ಬೆಳೆಸುವ ಮುನ್ನ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರವಾಗಿದೆ. ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಅವರು ತಿಳಿಸಿದರು.
ನನ್ನ ವಿರುದ್ಧದ ಪ್ರಕರಣದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡರೆ ಕೆಟ್ಟ ಸಾಂಪ್ರದಾಯವಾಗುತ್ತದೆ ಎಂಬ ಕಾರಣಕ್ಕೆ ಸಭೆಯಿಂದ ಹೊರಗುಳಿದಿದ್ದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಸಭೆ ನಡೆಸಲು ನೇಮಿಸಲಾಗಿತ್ತು. ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟೀಸು ನೀಡಿರುವುದು ಕಾನೂನು ಬಾಹಿರವಾಗಿದ್ದು, ನೋಟೀಸನ್ನು ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ ಎಂದರು.
ಕೆ. ಜೆ.ಅಬ್ರಹಾಂ ಒಬ್ಬ ಬ್ಲಾಕ್ ಮೈಲರ್. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ. ನಾನು ಯಾವುದೇ ಅಪರಾಧವನ್ನು ಮಾಡಿಲ್ಲ. ಜುಲೈ 26ರಂದು 1.30 ಗೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಇದು ರಾಜ್ಯಪಾಲರ ಕಾರ್ಯವೈಖರಿ ಸೂಚಿಸುತ್ತದೆ ಎಂದು ಸಿದ್ದರಾಮಯ್ಯ ವಿವರಿಸಿದರು.
ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರನ್ನು ಜನ ಆಶೀರ್ವಾದ ಮಾಡಿ ಕಳಿಸಿರುವ ಚುನಾಯಿತ ಸರ್ಕಾರದ ಮುಖ್ಯಮಂತ್ರಿಗೆ ನೋಟೀಸು ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕುಷವಾಗಿ ಪರಿಶೀಲಿಸಬೇಕು. ಏನು ನೋಡದೇ ಆತುರವಾಗಿ ಕೆಲಸ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
ಅಂದೇ ನೋಟೀಸು ನೀಡಿ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ವಿಶೇಷ ಕರ್ತವ್ಯಾಧಿಕಾರಿ ಪ್ರಭು ಶಂಕರ್ ಎಂಬುವರು ಕರೆ ಮಾಡಿ ಶೋಕಾಸ್ ನೋಟಿಸ್ ಸಿದ್ಧವಿದೆ ತೆಗೆದುಕೊಳ್ಳಬೇಕು ಎಂದಿದ್ದಾರೆ. ರಾತ್ರಿಯಾಗಿರುವುದರಿಂದ ಅದನ್ನು ಪಡೆಯಲಾಗಲಿಲ್ಲ. ಮಾರನೇ ದಿನ 2.00 ಗಂಟೆಗೆ ನೋಟೀಸನ್ನು ಆತುರವಾಗಿ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.