ಬಿಜೆಪಿ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪತಂತ್ರವಾಗಿ ಸ್ಪರ್ಧಿಸಲು ಸಿಪಿ ಯೋಗೇಶ್ವರ್ ನಿರ್ಧರಿಸಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆ ಕುತೂಹಲ ಘಟ್ಟ ತಲುಪಿದೆ.
ಚನ್ನಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಸ್ಪರ್ಧಿಸಲು ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೆ. ಜೆಡಿಎಸ್ ನಿಂದ ಸ್ಪರ್ಧಿಸಿದರೆ ಗೆಲುವು ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ್ದಾರೆ.
ಬಿಜೆಪಿ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಇಂದು ಸಂಜೆ 4 ಗಂಟೆಗೆ ಸ್ಪೀಕರ್ ಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದೇನೆ ಎಂದು ಅವರು ಹೇಳಿದ್ದಾರೆ.
ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಹಿಂದೆ ಸರಿದ ಕಾರಣ ಸಿಪಿ ಯೋಗೇಶ್ವರ್ ಗೆ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲು ಆಹ್ವಾನ ನೀಡಲಾಗಿತ್ತು. ಆದರೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಯೋಗೇಶ್ವರ್ ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಹಿನ್ನೆಲೆಯಲ್ಲಿ ಯೋಗೇಶ್ವರ್ ಬಿಜೆಪಿ ತೊರೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಲು ಸಿಪಿ ಯೋಗೇಶ್ವರ್ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸುವಂತೆ ಯೋಗೇಶ್ವರ್ ಗೆ ಆಹ್ವಾನ ನೀಡಿದೆ ಎಂದು ಹೇಳಲಾಗಿದೆ.
ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ನೀಡಿದ್ದ ಆಫರ್ ಅನ್ನು ನಾನು ತಿರಸ್ಕರಿಸಿದ್ದೇನೆ. ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದಾರೆ. ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಯೋಗೇಶ್ವರ್ ಹೇಳಿದರು.
ಚನ್ನಪಟ್ಟಣದಿಂದ ಸ್ಪರ್ಧಿಸಿದ್ದ ಎಚ್.ಡಿ. ಕುಮಾರಸ್ವಾಮಿ ಲೋಕಸಭೆಯಲ್ಲಿ ಜಯ ಸಾಧಿಸಿ ಕೇಂದ್ರ ಸಚಿವರಾಗಿರುವುದರಿಂದ ಈ ಕ್ಷೇತ್ರವನ್ನು ಉಳಿಸಿಕೊಳ್ಳುವ ಒತ್ತಡದಲ್ಲಿದ್ದಾರೆ. ಸತತ ಸೋಲುಂಡಿರುವ ಪುತ್ರ ನಿಖಿಲ್ ಕುಮಾರಸ್ವಾಮಿ ಈ ಕ್ಷೇತ್ರ ಕೈ ಬಿಟ್ಟು ಹೋಗಬಾರದು ಎಂಬ ಕಾರಣಕ್ಕೆ ಸ್ಪರ್ಧಿಸದೇ ಇರಲು ನಿರ್ಧರಿಸಿದ್ದಾರೆ.
ಚನ್ನಪಟ್ಟಣದಲ್ಲಿ ಜೆಡಿಎಸ್ ಗೆ ಸೂಕ್ತ ಅಭ್ಯರ್ಥಿ ಇಲ್ಲದ ಕಾರಣ ಸಿಪಿ ಯೋಗೇಶ್ವರ್ ಅವರನ್ನೇ ಜೆಡಿಎಸ್ ನಿಂದ ಸ್ಪರ್ಧಿಸುವಂತೆ ಆಹ್ವಾನಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಎಚ್.ಡಿ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮುಖಂಡರ ಸಭೆಯನ್ನು ಮತ್ತೊಮ್ಮೆ ಕರೆದಿದ್ದು, ಶೀಘ್ರದಲ್ಲೇ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳವ ಸಾಧ್ಯತೆ ಇದೆ. ಒಂದು ವೇಳೆ ಟಿಕೆಟ್ ನೀಡಿದರೆ ಮಂಗಳವಾರ ಅಥವಾ ಬುಧವಾರ ನಾಮಪತ್ರ ಸಲ್ಲಿಸಲು ಯೋಗೇಶ್ವರ್ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.