ಬಿಜೆಪಿಯ ವಿಧಾನಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ಸೋಮವಾರ ಸಭಾಪತಿ ಬಸವರಾಜ ಹೊರಟ್ಟಿಗೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಜೆಪಿಯ ನಾಮ ನಿರ್ದೇಶನರಾಗಿ ವಿಧಾನ ಪರಿಷತ್ ಸದಸ್ಯರಾಗಿದ್ದ ಸಿಪಿ ಯೋಗೇಶ್ವರ್ ರಾಜೀನಾಮೆ ಸಲ್ಲಿಸುವ ಮೂಲಲ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ದೃಢಪಡಿಸಿದ್ದಾರೆ. ಈ ಮೂಲಕ ಚನ್ನಪಟ್ಟಣ ಚುನಾವಣೆ ನಾಟಕೀಯ ತಿರುವುಗಳಿಗೆ ಕಾರಣವಾಗಿದೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಸದ್ಯದ ಪರಿಸ್ಥಿತಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ. ನಾನು ಜನಗಳ ಮಧ್ಯೆ ಇರಬೇಕು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದೇನೆ ಎಂದರು.
ನಾನು ಯಾವುದೇ ಪಕ್ಷಕ್ಕೆ ಹೋಗಿಲ್ಲ. ಯಾರನ್ನೂ ಸಂಪರ್ಕಿಸಿಲ್ಲ. ಈಗಲೂ ನಾನು ಜೆಡಿಎಸ್ ಗೆ ಕೂಡ ಟಿಕೆಟ್ ನೀಡಲು ಕೇಳಿದ್ದೇನೆ. ಮುಂದೆ ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂದು ಕೇಳಿಲ್ಲ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಇನ್ನೂ ರಾಜೀನಾಮೆ ನೀಡಿಲ್ಲ. ನನ್ನ ಕೆಲಸ ಗುರುತಿಸಿ ಯಾರೂ ಟಿಕೆಟ್ ಕೊಟ್ಟರೂ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಅವರು ಹೇಳಿದರು.
ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೂಡ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಲಾಗಿದೆ. ಯೋಗೇಶ್ವರ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಕಾಂಗ್ರೆಸ್ ಗೆಲ್ಲಲಿದೆ ಎಂದು ಕೆಲವು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.