ಗೆಲುವು ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ದುರಂತ ಘಟನೆ ಹಿನ್ನೆಲೆಯಲ್ಲಿ ಬೆಂಗಳೂರಿನ ಪೊಲೀಸರು ಆರ್ ಸಿಬಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಘಟನೆ ನಡೆದ 24 ಗಂಟೆಗಳ ನಂತರ ಕಬ್ಬನ್ ಪಾರ್ಕ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಕಾಲ್ತುಳಿತದಲ್ಲಿ ಎ1 ಆರೋಪಿಯಾಗಿ ಆರ್ ಸಿಬಿ ಮ್ಯಾನೇಜ್ ಮೆಂಟ್ ಹಾಗೂ ಎ2 ಆರೋಪಿಯಾಗಿ ಆರ್ ಸಿಬಿ ಇವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆಯಾದ ಡಿಎನ್ ಎ ವಿರುದ್ಧ ಹಾಗೂ ಎ3 ಆರೋಪಿಯಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಯುಡಿಆರ್ ಪ್ರಕರಣ ದಾಖಲಿಸಿಕೊಂಡಿರುವ ಕಬ್ಬನ್ ಪಾರ್ಕ್ ಪೊಲೀಸರು ಸೆಕ್ಷನ್ 101, 115, 118ರ ಅಡಿಯಲ್ಲಿ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿಯ ಅಸಹಜ ಸಾವು ಎಂದು ಉಲ್ಲೇಖಿಸಿದ್ದಾರೆ.
ಆರ್ ಸಿಬಿ ಈಗಾಗಲೇ ಕಾಲ್ತುಳಿತದಲ್ಲಿ ಮೃತಪಟ್ಟರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದ್ದು, ಗಾಯಗೊಂಡವರ ಚಿಕಿತ್ಸೆ ವೆಚ್ಚ ಭರಿಸುವುದಾಗಿ ಪ್ರಕಟಿಸಿದೆ. ಇದೇ ವೇಳೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ತಲಾ 5 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದೆ.


