ಬೆಂಗಳೂರು: ವಿಧಾನಸೌಧದ ಬಳಿ ಶಾಸಕರ ಭವನದ ಮುಂಭಾಗದಲ್ಲಿ ವಾಲ್ಮೀಕಿ ಪ್ರತಿಮೆ ಇರುವ ಜಾಗವನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಲೋಕೋಪಯೋಗಿ, ಪೊಲೀಸ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಶನಿವಾರ ನಡೆದ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.
ಶಾಸಕರ ಭವನದ ಬಳಿ ವಾಲ್ಮೀಕಿ ಪ್ರತಿಮೆ ಇದೆ. ಈ ಎರಡು ಎಕರೆ ಜಾಗವನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಹಂಪಿಯ ಹಜಾರ ರಾಮಸ್ವಾಮಿ ದೇವಾಲಯ ಮಾದರಿ
ವಾಲ್ಮೀಕಿ, ರಾಮಾಯಣದ ಪರಿಕಲ್ಪನೆಯಡಿ ಕಲ್ಲಿನ ಕೆತ್ತನೆಯನ್ನು ಇಡೀ ಪ್ರದೇಶದಲ್ಲಿ ಅಳವಡಿಸಲಾಗುವುದು. ಇದರ ಜೊತೆಗೆ ಧ್ವನಿವರ್ಧಕ, ವಿದ್ಯುತ್ ದೀಪಾಲಂಕಾರದೊಂದಿಗೆ ಕಂಗೊಳಿಸುವಂತೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಈ ತಪೋವನವನ್ನು ಹಂಪಿಯ ಹಜಾರ ರಾಮಸ್ವಾಮಿ ದೇವಾಲಯದ ಮಾದರಿಯಲ್ಲಿ ನಿರ್ಮಾಣ ಮಾಡಲಾಗುವುದು. ವಿಶೇಷವಾಗಿ ಲ್ಯಾಂಡ್ ಸ್ಕೇಪ್ ರೂಪಿಸಲಾಗುವುದು. ಈ ಸಂಬಂಧ ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ ಎಂದು ರಘುಮೂರ್ತಿ ಮಾಹಿತಿ ನೀಡಿದರು.
ಸ್ಥಳ ಪರಿಶೀಲನೆ ನಡೆಸಿದ ಸಚಿವರು
ಸಭೆಯ ನಂತರ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಒಂದು ಗಂಟೆಗೂ ಹೆಚ್ಚು ಕಾಲ ಸ್ಥಳ ಪರಿಶೀಲನೆ ನಡೆಸಿದರು. ಇಡೀ ಪ್ರದೇಶದಲ್ಲಿ ಏನೇನು ಬರಬೇಕು ಎಂಬ ಬಗ್ಗೆಯೂ ಇದೇ ಸಂದರ್ಭದಲ್ಲಿ ಚರ್ಚಿಸಲಾಯಿತು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎಂ. ಕನಗವಲ್ಲಿ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ದುಡಗಂಟಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಅಶೋಕ್ ಡಿ.ಆರ್, ಹಿರಿಯ ಅಧಿಕಾರಿಗಳಾದ ಕೆ.ಆರ್. ರಾಜಕುಮಾರ್, ಎಚ್. ಷಡಕ್ಷರಯ್ಯ, ಮುಖ್ಯ ಆರ್ಕಿಟೆಕ್ಟ್ ರಾಜೇಶ್ವರಿ ಬಸೂರು, ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಇತರರು ಹಾಜರಿದ್ದರು.



