ಗುಜರಾತ್ ಗಲಭೆ ಪ್ರಕರಣದಲ್ಲಿ ಸಾವಿರಾರು ಜನರ ಸಾವಿಗೆ ಕಾರಣವಾಗಿದ್ದ ಮೋದಿ ರಾಜೀನಾಮೆ ಕೊಟ್ಟಿದ್ದರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಗಲಭೆ ಪ್ರಕರಣದಲ್ಲಿ ರಾಜೀನಾಮೆ ಕೊಟ್ಟಿದ್ದರಾ? ಬಿಜೆಪಿಯ ಎಲ್ಲಾ ನಾಯಕರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಒಬ್ಬರಾದರೂ ರಾಜೀನಾಮೆ ಕೊಟ್ಟಿದ್ದರಾ? ಎಫ್ ಐಆರ್ ದಾಖಲಾಗಿ ಜಾಮೀನಿನ ಮೇಲೆ ಹೊರಗೆ ಇರುವ ಕುಮಾರಸ್ವಾಮಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರಾ ಎಂದು ಪ್ರಶ್ನಿಸಿದರು.
ಭ್ರಷ್ಟಾಚಾರ ನಿಗ್ರಹ ಘಟಕ ರದ್ದು ಮಾಡಿ ಲೋಕಾಯುಕ್ತ ಅಧಿಕಾರ ಮೊಟಕುಗೊಳಿಸಿದ್ದ ತಾವೇ ಲೋಕಾಯುಕ್ತ ತನಿಖೆ ಎದುರಿಸಬೇಕಾಗಿ ಬಂದಿದೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಎಸಿಬಿ ರಚನೆ ಆಗಿದೆ. ಈ ಬಗ್ಗೆ ಯಾರೂ ಪ್ರಶ್ನೆ ಮಾಡಲ್ಲ ಎಂದು ಮರು ಪ್ರಶ್ನಿಸಿದರು.
ನಾನು ಯಾವುದೇ ತಪ್ಪು ಮಾಡಿಲ್ಲ. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ತನಿಖೆ ಆಗಲಿ. ತನಿಖೆ ಎದುರಿಸಲು ಸಿದ್ಧನಿದ್ದೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.