ಬಳ್ಳಾರಿಯ ವಿಮ್ಸ್ ನಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವು ಪ್ರಕರಣ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರ ಬಳಿ ಮಾಹಿತಿ ಪಡೆದ ಸಚಿವ ಜುಮೀರ್ ಖಾನ್ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮುನ್ನಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲಾ ಆಸ್ಪತ್ರೆ ಯಲ್ಲಿ ಈ ಹಿಂದೆ ಸಂಭವಿಸಿದ್ದ ನಾಲ್ವರು ಬಾಣಂತಿಯರ ಸಾವು ಪ್ರಕರಣಕ್ಕೂ ಈ ಘಟನೆಗೆ ಸಂಬಂಧ ಇಲ್ಲ. ಕೂಡ್ಲಿಗಿ ಗುಡೇಕೋಟೆ ಪ್ರಾಥಮಿಕ ಅರೋಗ್ಯ ಕೇಂದ್ರ ದಿಂದ ಮಹಾಲಕ್ಷ್ಮಿ ಎಂಬುವರು ವಿಮ್ಸ್ ಗೆ ಇದೇ 24 ರಂದು ದಾಖಲಾಗಿ 26 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ.
ಈ ಬಗ್ಗೆ ಅರೋಗ್ಯ ಅಧಿಕಾರಿಗಳಿಂದ ವರದಿ ಪಡೆಯಲಾಗಿದೆ. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದರು.
ಬಾಣಂತಿರ ಸರಣಿ ಸಾವು ಪ್ರಕರಣಗಳು ಬೆಳಕಿಗೆ ಬಂದಿದ್ದರೂ ಸಚಿವ ಜಮೀರ್ ಖಾನ್ ಭೇಟಿ ನೀಡಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು. ಅಲ್ಲದೇ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದು, ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು.