ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ 9 ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮುಖ್ಯಮಂತ್ರಿ ಮಾತನಾಡಿದರು.
ಮೃತ ಅಯ್ಯಪ್ಪ ಮಾಲಾಧಾರಿಗಳನ್ನ 58 ವರ್ಷದ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ ಹಾಗೂ 20 ವರ್ಷದ ಸಂಜಯ ಸವದತ್ತಿ ಎಂದು ಗುರುತಿಸಲಾಗಿದೆ. ಉಳಿದ ಏಳು ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು ಬೆಂಗಳೂರು ಮತ್ತಿತರ ಕಡೆಗಳಿಂದ ಉನ್ನತ ಚಿಕಿತ್ಸೆಗಾಗಿ ತಜ್ಞ ವೈದ್ಯರನ್ನು ಕರೆಸಲಾಗಿದೆ.
ಇದೇ ವೇಳೆ ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು.
ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.
ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.