Wednesday, December 24, 2025
Google search engine
Homeಜಿಲ್ಲಾ ಸುದ್ದಿಮುರುಡೇಶ್ವರ ಸಮುದ್ರ ಪಾಲಾದ ಕೋಲಾರದ ನಾಲ್ವರು ವಿದ್ಯಾರ್ಥಿನಿಯರು: 5 ಲಕ್ಷ ರೂ. ಪರಿಹಾರ ಘೋಷಣೆ

ಮುರುಡೇಶ್ವರ ಸಮುದ್ರ ಪಾಲಾದ ಕೋಲಾರದ ನಾಲ್ವರು ವಿದ್ಯಾರ್ಥಿನಿಯರು: 5 ಲಕ್ಷ ರೂ. ಪರಿಹಾರ ಘೋಷಣೆ

ಮುರುಡೇಶ್ವರದಲ್ಲಿ ಸಮುದ್ರಕ್ಕೆ ಇಳಿದಿದ್ದ 7 ಮಂದಿ ವಿದ್ಯಾರ್ಥಿನಿಯರ ಪೈಕಿ ನಾಲ್ವರು ಸಮುದ್ರಪಾಲಾದ ಘಟನೆ ಮಂಗಳವಾರ ಸಂಭವಿಸಿದ್ದು, ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತುರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ  ದೀಕ್ಷಾ, ಲಾವಣ್ಯ, ವಂದನಾ ಮತ್ತು ಶ್ರಾವಂತಿ ಮೃತಪಟ್ಟಿದ್ದಾರೆ.

ಮುಳಬಾಗಿಲಿನ ಯಶೋಧಾ, ವೀಕ್ಷಣಾ, ಲಿಪಿಕಾ ಹೆಸರಿನ ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದೆ.

ಶೈಕ್ಷಣಿಕ ಪ್ರವಾಸದ ವೇಳೆ ಸಮುದ್ರದಲ್ಲಿ ಮಕ್ಕಳನ್ನು ಈಜಲು ಬಿಟ್ಟು ಬೇಜವಾಬ್ದಾರಿ ತೋರಿದ ಶಾಲಾ ಪ್ರಾಂಶುಪಾಲೆ ಶಶಿಕಲಾ ಅವರನ್ನು ಕೂಡಲೇ ಅಮಾನತು ಮಾಡಲಾಗಿದೆ. ಅತಿಥಿ ಉಪನ್ಯಾಸಕರು ಮತ್ತು ಡಿ ಗ್ರೂಪ್ ನೌಕರರನ್ನು ಸೇವೆಯಿಂದಲೇ ವಜಾಗೊಳಿಸಲಾಗಿದೆ.

5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮುರುಡೇಶ್ವರ ಶೈಕ್ಷಣಿಕ ಪ್ರವಾಸದ ವೇಳೆ ನಾಲ್ವರು ವಿದ್ಯಾರ್ಥಿನಿಯರ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದು, 5 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದ್ದಾರೆ.

ಬುಧವಾರ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದಿದ್ದಾರೆ.

ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments