ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಸುಮಾರು ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್ 15ರವರೆಗೆ ಪ್ರವೇಶ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜೋಗ ಜಲಪಾತದ ಮುಖ್ಯದ್ವಾರ ಮತ್ತು ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜನವರಿ ೧ರಿಂದ ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಪ್ರವೇಶ ನಿರ್ಭಂದಿಸಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 08182 251444ಗೆ ಕರೆ ಮಾಡಿ, ಪಡೆಯಬಹುದಾಗಿದೆ.