ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೂ ಅವರು ಸದ್ಯಕ್ಕೆ ಜೈಲಿನಲ್ಲೇ ಇರಬೇಕಾಗಿದೆ.
ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಾಂಕರ್ ದತ್ತ ಅವರನ್ನೊಳಗೊಂಡ ವಿಭಾಗೀಯ ಪೀಠ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಿದ್ದಾರೆ.
ಆದರೆ ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ಪ್ರತ್ಯೇಕ ತನಿಖೆ ನಡೆಸುತ್ತಿರುವುದರಿಂದ ಕೇಜ್ರಿವಾಲ್ ಸದ್ಯಕ್ಕೆ ಜಾಮೀನು ಸಿಕ್ಕಿದರೂ ಜೈಲಿನಿಂದ ಹೊರಗೆ ಬರಲು ಸಾಧ್ಯವಿಲ್ಲ. ಆದರೆ ಸುಪ್ರೀಂಕೋರ್ಟ್ ತೀರ್ಪಿನ ಆಧಾರದ ಮೇಲೆ ಸಿಬಿಐ ಪ್ರಕರಣದಲ್ಲಿ ಜಾಮೀನು ಪಡೆಯಲು ಪ್ರಯತ್ನಿಸಬಹುದು.
ಜಾರಿ ನಿರ್ದೇಶನಾಲಯ ಈಗಾಗಲೇ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಸಿದೆ. ಅಲ್ಲದೇ ಕೇಜ್ರಿವಾಲ್ ಈಗಾಗಲೇ ಜೈಲಿನಲ್ಲಿ 90 ದಿನ ಕಳೆದಿರುವುದರಿಂದ ಅವರಿಗೆ ಜಾಮೀನು ಮಂಜೂರು ಮಾಡಬಹುದಾಗಿದೆ ಎಂದು ಸುಪ್ರೀಮಕೋರ್ಟ್ ಹೇಳಿದೆ.
ಮಾರ್ಚ್ 21ರಂದು ಇಡಿ ಮದ್ಯ ನೀತಿ ಹಗರಣದ ಪ್ರಮುಖ ಆರೋಪಿ ಎಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.