ಬೆಂಗಳೂರು: ನಟ ಧನ್ವೀರ್ ಗೌಡ ಅವರು ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ಗೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ನಿಜ ಎಂದು ಆರ್.ಆರ್. ನಗರ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.
ನಾಗರಾಜ್ಗೆ ಕರೆ ಮಾಡಿ ಬೈದಿರುವುದು ನಿಜ. ನನ್ನಿಂದ ತಪ್ಪಾಗಿದೆ, ದಯವಿಟ್ಟು ಕ್ಷಮಿಸಿಬಿಡಿ ಎಂದು ಪೊಲೀಸರ ಮುಂದೆ ಧನ್ವೀರ್ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಬಗ್ಗೆ ತಾನು ಯಾವುದೇ ಹೇಳಿಕೆ ನೀಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಎಐ ಮೂಲಕ ಸೃಷ್ಟಿಸಿರುವುದಾಗಿದೆ ಎಂದು ಧನ್ವೀರ್ ಸ್ಪಷ್ಟಪಡಿಸಿದ್ದಾರೆ.
ವಿಜಯಲಕ್ಷ್ಮಿ ಹಾಗೂ ಅವರ ಮ್ಯಾನೇಜರ್ ನಾಗರಾಜ್ ಮನೆಗೆ ಬಂದು ಗಲಾಟೆ ಮಾಡಿದ್ದರು. ಈ ವೇಳೆ ತಮ್ಮ ತಂದೆ-ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಇದರಿಂದ ಕೋಪಗೊಂಡು ನಾಗರಾಜ್ಗೆ ಬೈದಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಇನ್ನು ಹಣಕಾಸಿನ ವಿಚಾರವಾಗಿ ಗಲಾಟೆ ನಡೆದಿದ್ದು, ಲೆಕ್ಕಪತ್ರ ನೀಡಲು ತಾನು ಸಿದ್ಧನಿದ್ದೇನೆ. ಆದರೆ, ಅವರೇ ಲೆಕ್ಕ ಕೇಳಲು ಬರುತ್ತಿಲ್ಲ. ತನಗೆ ಕೆಟ್ಟ ಹೆಸರು ತರಲು ಈ ರೀತಿಯ ಆಡಿಯೋ ಸೃಷ್ಟಿಸಲಾಗಿದೆ ಎಂದು ಧನ್ನೀರ್ ಆರೋಪಿಸಿದ್ದಾರೆ.
ಆರ್.ಆರ್. ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಅವರು ಧನ್ವೀರ್ ಅವರನ್ನು ವಿಚಾರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಪಡಿಸುವಂತೆ ಧನ್ವೀರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.
