ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಮತ್ತೊಮ್ಮೆ ಬಂಧನಕ್ಕೆ ಒಳಗಾಗಿದ್ದಾರೆ. ಇದರಿಂದ ಮತ್ತೆ ಜೈಲುಪಾಲಾಗಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಎದುರಿಸಲಿದ್ದಾರೆ.
ಜಾತಿ ನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಶುಕ್ರವಾರ ಮುನಿರತ್ನ ಜೈಲಿನಿಂದ ಹೊರಬಂದ ತಕ್ಷಣವೇ ಮಾಗಡಿ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ಕಗ್ಗಲಿಪುರ ಪೊಲೀಸರ ತಂಡ ಬಂಧಿಸಿದೆ.
ವೈದ್ಯಕೀಯ ತಪಾಸಣೆ ನಂತರ ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದಾರೆ. ವಿಚಾರಣೆ ನಂತರ ಸಂಜೆ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಗ್ಗಲಿಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ 40 ವರ್ಷ ವಯಸ್ಸಿನ ಮಹಿಳೆ ದೂರು ನೀಡಿದ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ವಿರುದ್ಧ ಎಫ್‌ಐಆರ್ ದಾಖಲಾಗಿದೆ.