ವಿಶ್ವಪ್ರಸಿದ್ಧ ದಸರಾ ಹಬ್ಬಕ್ಕೆ ಸಿದ್ಧಗೊಳ್ಳುತ್ತಿರುವ ಸಮಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿ ಹೋಟೆಲ್ ನಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ನಲ್ಲಿ ನೀಲಿ ಬಣ್ಣದ ಪ್ಲಾಸ್ಟಿಕ್ ಚೀಲದಲ್ಲಿ ಅಪರಿಚಿತರು ಸ್ಫೋಟಕಗಳನ್ನು ಇರಿಸಿ ಪರಾರಿಯಾಗಿದ್ದಾರೆ.
ಸ್ಫೋಟಕ ವಸ್ತುಗಳನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.
ಕಲ್ಲು ಗಣಿಗಾರಿಕೆಗೆ ಮತ್ತು ಪ್ರಾಣಿಗಳ ಬೇಟೆಗೆ ಸ್ಫೋಟಕಗಳನ್ನು ಬಳಸಲು ತೆಗೆದುಕೊಂಡು ಹೋಗಿರಬಹುದು ಎಂದು ಸಂದೇಹಪಡಲಾಗಿದೆ. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದು, ಹೋಟೆಲ್ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಿದ್ದಾರೆ.
ಟಿ. ನರಸಿಪುರ ತಾಲೂಕಿನಲ್ಲಿ ಮಾನವ-ಪ್ರಾಣಿ ಸಂಘರ್ಷ ಆಗಾಗ ನಡೆಯುತ್ತಿರುತ್ತದೆ. ಪ್ರಾಣಿಗಳನ್ನು ಬೇಟೆಯಾಡಲು ಅಪರಿಚಿತರು ಸ್ಫೋಟಕಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ.
ಸ್ಫೋಟಕಗಳು ಕಳೆದ ವರ್ಷ ಮೈಸೂರು ದಸರಾ ಮೇಲೆ ಉಗ್ರರ ಕರಿ ನೆರಳು ಬಿದ್ದು ಶಂಕಿತರನ್ನು ವಶಕ್ಕೆ ಪಡೆಯಲಾಗಿತ್ತು.