ಬೆಂಗಳೂರು: ಯಲಹಂಕದ ಕೋಗಿಲು ಲೇಔಟ್ನಲ್ಲಿ ಸರ್ಕಾರಿ ಜಾಗ ಒತ್ತುವರಿ ಮಾಡಿ, ಅನಧಿಕೃತ ಮನೆಗಳ ನಿರ್ಮಾಣಕ್ಕೆ ಪ್ರಚೋದನೆ ನೀಡಿ, ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ನಾಲ್ವರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.
ಯಲಹಂಕ ಪೊಲೀಸರು ವಾಸಿಂ ಬೇಗ್, ವಿಜಯ್ ಕುಮಾರ್ ಎಂಬುವವರನ್ನು ಕೋಗಿಲು ಸರ್ಕಾರಿ ಜಾಗದಲ್ಲಿ ಒತ್ತುವರಿ ಪ್ರಕರಣದಲ್ಲಿ ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ಯಲಹಂಕ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ ಎಂಜಿನಿಯರ್ ಸಂತೋಷ್ ಕುಮಾರ್ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.
ಕೋಗಿಲು ಗ್ರಾಮದ ಸರ್ವೆ ನಂಬರ್ 99ರಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಆದೇಶದಂತೆ 14 ಎಕರೆ 36 ಗುಂಟೆ ಜಮೀನನ್ನು ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆಗೆ ಹಸ್ತಾಂತರಿಸಲಾಗಿತ್ತು. ಈ ಜಾಗದಲ್ಲಿ ಬಯೋ ಮೆಥನೈಸೆಷನ್ ಘಟಕ, ಎಳನೀರು ಬುರುಡೆ ಸಂಸ್ಕರಣೆ ಹಾಗೂ ಪ್ರಾಣಿ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ನಿರ್ಮಿಸಲು 2023ರಲ್ಲಿಯೇ ಟೆಂಡರ್ ಪ್ರಕ್ರಿಯೆ ಮುಗಿದು ಕಾರ್ಯಾದೇಶ ನೀಡಲಾಗಿತ್ತು.
ಆದರೆ, ಈ ಸರ್ಕಾರಿ ಜಾಗದ ಸುಮಾರು 4 ಎಕರೆ ಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿ 160ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿತ್ತು. ಡಿಸೆಂಬರ್ 20, 2025 ರಂದು ಜಿಲ್ಲಾಡಳಿತ ಮತ್ತು ಬಿಎಸ್ಡಬ್ಲ್ಯೂಎಂಎಲ್ ಜಂಟಿ ಕಾರ್ಯಾಚರಣೆ ನಡೆಸಿ ಈ ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಿತ್ತು.
ಕೋಗಿಲು ಲೇಔಟ್ನಲ್ಲಿ ಅಕ್ರಮ ವಸತಿಗಳ ನಿರ್ಮಾಣದ ಹಿಂದೆ ದೊಡ್ಡ ಜಾಲವಿರುವುದು ಬೆಳಕಿಗೆ ಬಂದಿದೆ. ಎ1 ವಿಜಯ್, ಎ2 ವಾಸಿಂ ಉಲ್ಲಾ ಬೇಗ್, ಎ3 ಮುನಿ ಆಂಜಿನಪ್ಪ ಹಾಗೂ ಎ4 ರಾಬಿನ್ ಎಂಬುವವರು ಸ್ಥಳೀಯರಿಂದ ಹಣ ಪಡೆದು ಸರ್ಕಾರಿ ಜಾಗದಲ್ಲಿ ಅನಧಿಕೃತ ಮನೆಗಳನ್ನು ನಿರ್ಮಿಸಲು ಮತ್ತು ಅವುಗಳನ್ನು ನಿರ್ವಹಿಸಲು ಸಹಕಾರ ನೀಡುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹೀಗಾಗಿ ಇವರ ವಿರುದ್ಧ ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



