Friday, May 15, 2026
Google search engine
Homeರಾಜ್ಯಹಿರಿಯ ನಾಗರಿಕರಿಗೆ ಸಿಹಿಸುದ್ದಿ: 75 ವರ್ಷ ಮೇಲ್ಪಟ್ಟವರಿಗೆ ಅನ್ನ ಸುವಿಧಾ ಯೋಜನೆ ವಿಸ್ತರಣೆ

ಹಿರಿಯ ನಾಗರಿಕರಿಗೆ ಸಿಹಿಸುದ್ದಿ: 75 ವರ್ಷ ಮೇಲ್ಪಟ್ಟವರಿಗೆ ಅನ್ನ ಸುವಿಧಾ ಯೋಜನೆ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿನ 75 ವರ್ಷ ಮೇಲ್ಪಟ್ಟ AAY ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ ಅನ್ನ ಸುವಿಧಾ ಯೋಜನೆ ವಿಸ್ತರಿಸುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದಾರೆ.

ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಶುಕ್ರವಾರ ನಡೆದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅನ್ನ ಸುವಿಧಾ ಯೋಜನೆಯ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವು ಆತ್ಮಗೌರವದ ಬದುಕಿಗೆ ನೂತನ ಹೆಜ್ಜೆ ಇರಿಸಿದೆ. 75 ವರ್ಷ ಮೇಲ್ಪಟ್ಟ ಎಎವೈ ಹಾಗೂ ಬಿಪಿಎಲ್ ಪಡಿತರದಾರರಿಗೆ ಅನ್ನ ಸುವಿಧಾ ಯೋಜನೆ ವಿಸ್ತರಣೆ ಮಾಡಲಾಗುತ್ತಿದೆ ಎಂದರು.

ಅನ್ನ ಸುವಿಧಾ ಯೋಜನೆಯಡಿ ಹಿರಿಯ ನಾಗರಿಕರ ಮನೆ ಬಾಗಿಲಿಗೆ ಪಡಿತರ ತಲುಪುತ್ತದೆ. ಇಂದೇ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಾಯಿಸಿ, ಸರ್ಕಾರದ ಜನಹಿತದ ಪ್ರಯತ್ನದಲ್ಲಿ ಭಾಗಿಯಾಗಿರಿ ಎಂದು ಅವರು ಕರೆ ನೀಡಿದರು.

ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.

ಜಿಕೆವಿಕೆ ಅಧ್ಯಯನದ ಪ್ರಕಾರ ಬೆಂಗಳೂರಿನಲ್ಲಿ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಉಲ್ಲೇಖಿಸಿದರು.

ಗೊತ್ತಿದ್ದೂ ಗೊತ್ತಿದ್ದೂ ಆಹಾರ ವೇಸ್ಟ್ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ. ಅನ್ನ ವೇಸ್ಟ್ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ‌. ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ ಎಂದು ಅವರು ಹೇಳಿದರು.

ಯಾರೂ ಹಸಿವಿನಿಂದ ಮಲಗಬಾರದು ಎಂಬ ಕಾರಣಕ್ಕೆ ಆಹಾರ ಭದ್ರತಾ ಕಾಯ್ದೆಯನ್ನು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿತು. ಪ್ರಧಾನಿ ಮನ ಮೋಹನ್ ಸಿಂಗ್. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ಕಾಂಗ್ರೆಸ್ಸಿಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ಕಾಂಗ್ರೆಸ್ ಬದ್ಧತೆ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments