ಬೆಂಗಳೂರು: ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ, ಕೋರ್ಟ್ ಆದೇಶಿಸಿದೆ. ಈ ಮೂಲಕ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಮತ್ತೊಂದು ರಿಲೀಫ್ ನೀಡಲಾಗಿದೆ.
ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದಂತ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿತು.
ಈ ವೇಳೆ ನ್ಯಾಯಪೀಠದ ಮುಂದೆ ವಾದ ಮಂಡಿಸಿದಂತ ಎಸ್‌ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ, ಎಚ್. ಡಿ. ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲ, ಈ ಕೇಸ್‌ನಲ್ಲಿ ನಾನ್ ಬೇಲಬಲ್ ಸೆಕ್ಷನ್ ಇಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.
ವಾದ-ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಲಯವು, ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದರು. ಹೀಗಾಗಿ ಮಹಿಳೆ ಅಪಹರಣ ಪ್ರಕರಣದ ನಂತ್ರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಜಾಮೀನು ಸಿಕ್ಕಂತೆ ಆಗಿದೆ.