ಬೆಂಗಳೂರು:ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್ ಮತ್ತು ಕಲಬುರಗಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಮಂಗಳವಾರ ಮಳೆಯಾಗಲಿದ್ದು, ಆ ಪೈಕಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ನೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಮೈಸೂರಿನಲ್ಲಿಯೂ ಮಳೆಯ ಮುನ್ಸೂಚನೆಯಿದೆ.
ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ, ಹಾಗೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಉತ್ತರ ಒಳನಾಡು ಭಾಗದಲ್ಲಿ ಮೇ 21ರವರೆಗೆ ಮಳೆಯ ಚಟುವಟಿಕೆ ಮುಂದುವರಿಯುವ ನಿರೀಕ್ಷೆಯಿದೆ.
ಹವಾಮಾನದಲ್ಲಿ ಸ್ವಲ್ಪ ಸುಧಾರಣೆ ಕಾಣಬಹುದು. ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯೊಂದಿಗೆ ಗುಡುಗು-ಮಿಂಚಿನ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಮಧ್ಯಾಹ್ನದ ಬಳಿಕ ಮೋಡಗಟ್ಟುವಿಕೆ ಹಾಗೂ ಸಂಜೆ ವೇಳೆಗೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಬೆಂಗಳೂರಿನಲ್ಲಿ ಭಾರೀ ಮಳೆ
ಬೆಂಗಳೂರಿನ ಪ್ರಮುಖ ಭಾಗಗಳಲ್ಲಿ ಸೋಮವಾರ ಸಂಜೆ ಗುಡುಗು, ಸಿಡಿಲು ಸಹಿತ ಭಾರೀ ಗಾಳಿ ಮಳೆ ಸುರಿದು ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದವು.
ಎಂಜಿ ರಸ್ತೆ, ಬ್ರಿಗೇಡ್ ರೋಡ್, ಕಬ್ಬನ್ ಪಾರ್ಕ್ ರಸ್ತೆ, ವಿಧಾನಸೌಧ, ಶಿವಾನಂದ ಸರ್ಕಲ್, ಜಯನಗರ, ಜೆಪಿ ನಗರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಹೆಬ್ಬಾಳ ಸೇರಿದಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲಿ ಮಳೆಯಿಂದ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿತ್ತು.



