ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ಮಳೆ ಮುಂದುವರಿಯಲಿದೆ. ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಕೊಡಗು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಸಾಧಾರಣಕ್ಕಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮಂಗಳವಾರದ ಕ್ಯಾಸಲ್ರಾಕ್, ನೆಲೋಗಿ, ಗಂಗಾಪುರ, ಬಿಳಗಿ, ಆಲಮಟ್ಟಿ, ತಾಳಿಕೋಟೆ, ಸುಳ್ಯ, ರಾಯಲ್ಪಾಡು, ಕೋಲಾರ, ಗುಬ್ಬಿ, ಗೋಕರ್ಣ, ಚಿಕ್ಕಬಳ್ಳಾಪುರ, ಅಥಣಿ, ಯಡ್ರಾಮಿ, ಉಡುಪಿ, ಶಕ್ತಿನಗರ, ಸಂಕೇಶ್ವರ, ಪುತ್ತೂರು, ಪೊನ್ನಂಪೇಟೆ, ಕುಂದಾಪುರ, ಕೊಟ್ಟಿಗೆಹಾರ, ಹುಣಸಗಿ, ಕೆಂಭಾವಿ, ಹೆಚ್.ಡಿ.ಕೋಟೆ, ಧರ್ಮಸ್ಥಳ, ಚಿಂಚೋಳಿ, ಮುದ್ದೇಬಿಹಾಳ, ಕಮಲಾಪುರ, ಬೀದರ್, ಭಾಲ್ಕಿ ಹಾಗೂ ಭಾಗಮಂಡಲದಲ್ಲಿ ಉತ್ತಮ ಮಳೆಯಾಗಿದೆ.
ಸೆಪ್ಟೆಂಬರ್ ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ
ದೇಶದ ಹಲವೆಡೆ ಸೆಪ್ಟೆಂಬರ್ ತಿಂಗಳಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಈ ತಿಂಗಳಲ್ಲಿ 167.9 ಮಿ.ಮೀ ಮಳೆಯಾಗುತ್ತದೆ. ಆದರೆ ಈ ಬಾರಿ ಶೇ.109ರಷ್ಟು ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಈಶಾನ್ಯ ಭಾರತ, ಪೂರ್ವ ಭಾರತ, ದಕ್ಷಿಣ ಭಾರತ ಮತ್ತು ವಾಯುವ್ಯ ಭಾರತದ ಅನೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ದೇಶದ ಉಳಿದ ಭಾಗಗಳಲ್ಲಿ ಸಾಧಾರಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮಹಾಪಾತ್ರ ತಿಳಿಸಿದ್ದಾರೆ.
ಭಾರತದಲ್ಲಿ 1980ರಿಂದ ಪ್ರತಿ ವರ್ಷವೂ ಸೆಪ್ಟಂಬರ್‌ನಲ್ಲಿ ಮಳೆ ಹೆಚ್ಚುತ್ತಿದೆ. 1986, 1991, 2001, 2004, 2010, 2015 ಮತ್ತು 2019 ವರ್ಷಗಳಲ್ಲಿ ಸೆಪ್ಟಂಬರ್‌ನಲ್ಲಿ ಕಡಿಮೆ ಮಳೆ ದಾಖಲಾಗಿದೆ. ಆ ತಿಂಗಳಲ್ಲಿ ಪಶ್ಚಿಮ ಮಧ್ಯ ಭಾರತ, ವಾಯುವ್ಯ ಭಾರತ ಮತ್ತು ದಕ್ಷಿಣ ಭಾರತದ ಹೆಚ್ಚಿನ ಭಾಗಗಳಲ್ಲಿ ಮಾಸಿಕ ಸರಾಸರಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರುವ ಸಾಧ್ಯತೆ ಇದೆ ಎಂದು ಮಹಾಪಾತ್ರ ಹೇಳಿದ್ದಾರೆ.
ಉತ್ತರಾಖಂಡದ ಹಲವು ಭಾಗಗಳಲ್ಲಿ ಸೋಮವಾರ ರಾತ್ರಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಹಠಾತ್ ಪ್ರವಾಹ ಉಂಟಾಗಿದೆ. ಭಾರಿ ಮಳೆ, ಪ್ರವಾಹದಿಂದ ರಸ್ತೆಗಳು, ಮನೆಗಳಿಗೆ ಹಾನಿಯಾಗಿದ್ದು, ಅನೇಕ ಜನ ಕಣ್ಮರೆಯಾಗಿರುವ ಬಗ್ಗೆ ವರದಿಯಾಗಿದೆ.



