ಖಾಸಗಿ ಬಸ್ 500 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 13 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದೆ.
ಇಲ್ಲಿನ ಸಿರ್ಮೌರ್ ಜಿಲ್ಲೆಯಲ್ಲಿ ಶಿಮ್ಲಾದಿಂದ ರಾಜ್‌ಗಢ ಮೂಲಕ ಕುಪ್ವಿಗೆ ಹೋಗುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ರಸ್ತೆಯಿಂದ ಜಾರಿದ ಬಸ್ 500 ಅಡಿ ಆಳದ ಕಂದಕಕ್ಕೆ ಬಿದ್ದಿದೆ.
ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸಂಗ್ರಾಹ್ ಸುನಿಲ್ ಕಾಯತ್ ದುರಂತದಲ್ಲಿ 9 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ ಎಂದು ಹೇಳಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಮಾಹಿತಿ ರವಾನಿಸಲಾಗಿದ್ದು, ಪರಿಹಾರ ಕಾರ್ಯಾಚರಣೆ ಭರದಿಂದ ಸಾಗಿದೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಪಘಾತದ ನಿಖರವಾದ ಕಾರಣ ಇನ್ನೂ ನಿರ್ಧರಿಸಲಾಗಿಲ್ಲವಾದರೂ, ರಸ್ತೆಯ ಮೇಲಿನ ಹಿಮದಿಂದಾಗಿ ಚಾಲಕ ನಿಯಂತ್ರಣ ಕಳೆದುಕೊಂಡಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವೀಡಿಯೊಗಳಲ್ಲಿ, ದೊಡ್ಡ ಜನಸಮೂಹ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿರುವುದು, ಬಸ್ಸಿನ ಅವಶೇಷಗಳಿಂದ ಗಾಯಾಳುಗಳನ್ನು ಹೊರತೆಗೆಯಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತದೆ.
ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಮೊತ್ತ ಘೋಷಿಸಿದ್ದಾರೆ.



