ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿದೆ.
ಮುಂಜಾಗ್ರತಾ ಕ್ರಮವಾಗಿ ಜುಲೈ 2 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ದರ್ಶನ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ನದಿ, ಕೆರೆ ಹಾಗೂ ಸಮುದ್ರ ತೀರಗಳಿಗೆ ತೆರಳಬಾರದು ಎಂದು ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಮಳೆ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ನದೀತೀರ, ಸಮುದ್ರತೀರ ಮತ್ತು ತಗ್ಗು ಪ್ರದೇಶಗಳಿಗೆ ತೆರಳುವುದನ್ನು ತಪ್ಪಿಸಬೇಕು ಎಂದು ತಿಳಿಸಿದ್ದಾರೆ.
ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನಗಳನ್ನು ಬಿಟ್ಟು ತೆರಳದಂತೆ ಸೂಚಿಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮನೆ ಮೇಲೆ ತಡೆಗೋಡೆ ಬಿದ್ದು 3 ಸಾವು
ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಸುರಿದ ಮಳೆಗೆ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ಪರಿಣಾಮ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಶಾಂತ (46), ಅನಾಮಿಕ ಚೌರಾಸಿಯಾ (8) ಮತ್ತು ಪರಿ (4) ಮೃತಪಟ್ಟಿದ್ದಾರೆ. ಆವಶೇಷಗಳಡಿ ಸಿಲುಕಿದ್ದ ಅಲ್ಕಾ (14), ಅನುಷಾ (11), ಬಾಲಕೃಷ್ಣ( 48) ಅವರನ್ನು ರಕ್ಷಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಂಚಿನ ಚಾವಣಿಯ ಮನೆ ಕುಸಿದ ಪರಿಣಾಮ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಸಾವು ಕಂಡಿದ್ದಾರೆ.
ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಒಟ್ಟು ಆರು ಮಂದಿ ಇದ್ದರು ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡ ಸ್ಥಳಕ್ಕೆ ದೌಡಾಯಿಸಿ ಬಂದು ರಕ್ಷಣಾ ಕಾರ್ಯಾಚರಣೆ ನಡೆಸಿದೆ.
ಮೂಲತಃ ಬಿಹಾರ ರಾಜ್ಯದವರಾದ ಬಾಲಕೃಷ್ಣ ಅವರ ಕುಟುಂಬ 20 ವರ್ಷಗಳಿಂದ ಕಂಕನಾಡಿ ಗ್ರಾಮದ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ಪ್ರದೇಶದಲ್ಲಿ ವಾಸಿಸುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್, ಪಾಲಿಕೆ ಕಮಿಷನರ್ ರವಿಚಂದ್ರ ನಾಯಕ್ ಸೇರಿದಂತೆ ಹಲವು ಭೇಟಿ ನೀಡಿದರು.



