ಬೆಂಗಳೂರು: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸಾಗುವ ಹಾದಿಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿರುವ ಮಧ್ಯೆಯೇ ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಕಡೆ ಭಾರೀ ಪ್ರಮಾಣದ ಜಿಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್ ಗಳು ಪತ್ತೆ ಹಚ್ಚಲಾಗಿದೆ.
ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 50 ಡಿಟೋನೇಟರ್ ಹಾಗೂ 225 ಜಿಲೆಟಿನ್ ಕಡ್ಡಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾಡ ಅಗ್ರಹಾರದ ನಿವಾಸಿ ವೆಂಕಟರಾಮ ರೆಡ್ಡಿ ಎಂಬಾತನ ಬಳಿ ಈ ಸ್ಫೋಟಕಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಜಮೀನಿನಲ್ಲಿ ಬಂಡೆಗಳನ್ನು ಒಡೆಯಲು ಈ ಸ್ಫೋಟಕಗಳನ್ನು ತರಲಾಗಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆದರೆ ಪರವಾನಗಿ ಇಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಸ್ಫೋಟಕಗಳನ್ನು ದಾಸ್ತಾನು ಮಾಡಿದ್ದೇಕೆ ಎಂಬ ಬಗ್ಗೆ ಅವಲಹಳ್ಳಿ ಠಾಣೆ ಪೊಲೀಸರು ತೀವ್ರ ತನಿಖೆ ಮುಂದುವರಿಸಿದ್ದಾರೆ.
ಕೇವಲ ಬಂಡೆ ಹೊಡೆಯಲು ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಲಾಗಿತ್ತೇ ಅಥವಾ ಬೇರೆ ಕಾರಣ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಸ್ಫೋಟಕಗಳ ಕಾಯಿದೆ, 1884 ರ ಅಡಿ (Explosives Act, 1884) ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್ ಬಳಿಯ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು ಭದ್ರತಾ ದೃಷ್ಟಿಯಿಂದ ಭಾರಿ ಕೋಲಾಹಲ ಸೃಷ್ಟಿಸಿತ್ತು.



