ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯ ಮೂಡಿಗೆರೆ, ಚಿಕ್ಕಮಗಳೂರು, ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವರು, ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು.
ಅಲ್ಲದೆ, ಸಾಂತ್ವನ ಕೇಂದ್ರಕ್ಕೂ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳ ಬಗ್ಗೆ ಸಂತ್ರಸ್ತರಿಂದ ಮಾಹಿತಿ ಪಡೆದರು. ಸಾಂತ್ವನ ಕೇಂದ್ರಗಳಲ್ಲಿ ಎಲ್ಲಾ ಮೂಲ ಸೌಕರ್ಯ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬೆಳಗ್ಗೆ 10 ಗಂಟೆಗೆ ಮೂಡಿಗರೆ ತಾಲೂಕಿನ ಕುನ್ನಹಳ್ಳಿಯಿಂದ ಮಳೆ ಹಾನಿ ವೀಕ್ಷಣೆ ಆರಂಭಿಸಿದ ಸಚಿವ ಕೆ.ಜೆ.ಜಾರ್ಜ್, ಸಂಜೆವರೆಗೂ ಮೂರು ತಾಲೂಕುಗಳ 10 ಪ್ರದೇಶಗಳಿಗೆ ಭೇಟಿ ನೀಡಿ, ಮನೆ ಕುಸಿತದಿಂದ ತೊಂದರೆ ಎದುರಿಸುತ್ತಿರುವ ಸಂತ್ರಸ್ತರ ಅಹವಾಲು ಆಲಿಸಿದರು.
ಅಲ್ಲದೆ, ತಕ್ಷಣದ ಪರಿಹಾರವಾಗಿ 1.20 ಲಕ್ಷ ರೂ. ನೀಡುವುದರ ಜತೆಗೆ ಇನ್ನೂ 3.80 ಲಕ್ಷ ರೂ. ಮಂಜೂರು ಮಾಡಿ ಮನೆ ನಿರ್ಮಿಸಿಕೊಡುವುದಾಗಿ ತಿಳಿಸಿದರು.