ನಾಯಕತ್ವ ಮತ್ತು ತಂಡವನ್ನು ತೊರೆದಿದ್ದ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡಕ್ಕೆ ಶುಭಮನ್ ಗಿಲ್ ಸಾರಥ್ಯದಲ್ಲಿ ಹೊಸ ರೂಪ ಪಡೆದಿರುವ ಗುಜರಾತ್ ಟೈಟಾನ್ಸ್ ತಂಡ 6 ರನ್ ಸೋಲುಣಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಅಹಮದಾಬಾದ್ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಗೆ 168 ರನ್ ಗಳಿಸಿತು. ಸಾಧಾರಣ ಗುರಿ ಬೆಂಬತ್ತಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್ ಗಳಿಸಲಷ್ಟೇ ಶಕ್ತವಾಯಿತು.
ಮುಂಬೈ ಇಂಡಿಯನ್ಸ್ ಖಾತೆ ತೆರೆಯುವ ಮುನ್ನವೇ ಇಶಾನ್ ಕಿಶನ್ ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಯಿತು. ಆದರೆ ಮಾಜಿ ನಾಯಕ ರೋಹಿತ್ ಶರ್ಮ ಮತ್ತು ಡೆವಾಲ್ಡ್ ಬ್ರೇವಿಸ್ ತಂಡವನ್ನು ಕುಸಿತದಿಂದ ಪಾರು ಮಾಡಿದರು. ರೋಹಿತ್ 29 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 43 ರನ್ ಗಳಿಸಿ ಔಟಾದರೆ, ಬ್ರೇವಿಸ್ 38 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 46 ರನ್ ಬಾರಿಸಿದರು.
ನಮನ್ ದಿರ್ (20) , ತಿಲಕ್ ವರ್ಮಾ (25) ರನ್ ಗಳಿಸಿದ್ದಾಗ ತಂಡ ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಕೊನೆಯ ಹಂತದಲ್ಲಿ 18 ರನ್ ಅಂತರದಲ್ಲಿ 5 ವಿಕೆಟ್ ಕಳೆದುಕೊಂಡು ಸೋಲಿನ ಹಾದಿ ತುಳಿಯಿತು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ ಜಸ್ ಪ್ರೀತ್ ಬುಮ್ರಾ ದಾಳಿಗೆ (14/3) ಮಾರಕ ದಾಳಿಗೆ ತತ್ತರಿಸಿ ಬೃಹತ್ ಮೊತ್ತ ಕಲೆಹಾಕುವ ಅವಕಾಶ ಕಳೆದುಕೊಂಡಿತು. ಸಾಯಿ ಸುದರ್ಶನ್ 39 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 45 ರನ್ ಗಳಿಸಿ ವೈಯಕ್ತಿಕ ಗರಿಷ್ಠ ಸಾಧನೆ ಮಾಡಿದರು.