Sunday, June 28, 2026
Google search engine
Homeರಾಜ್ಯಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಯೋಜನೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಯೋಜನೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು: ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ‌ ಮುಂಬಯಿ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನು ಘೋಷಿಸಬೇಕು. ಇದರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಿಗೆ ಅಪಾರ ಪ್ರಯೋಜನ ಆಗಲಿದೆ ಎಂದು ಕೋರಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಸಹಾಯಕ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿದ್ದಾರೆ.

ಮಂಗಳವಾರವೇ ಈ ಪತ್ರ ಬರೆದಿರುವ ಅವರು, ಈ ಸಲದ ಕೇಂದ್ರ ಬಜೆಟ್‌ನಲ್ಲಿ ಈಗಾಗಲೇ ಘೋಷಿಸಿರುವ ಮುಂಬೈ-ಪುಣೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನೇ ಬೆಂಗಳೂರಿನವರೆಗೂ ವಿಸ್ತರಿಸಬಹುದು ಎಂದಿದ್ದಾರೆ.

ಬಜೆಟ್‌ನಲ್ಲಿ ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗಳನ್ನು ಘೋಷಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ ಈ ಎರಡೂ ಮಾರ್ಗಗಳಲ್ಲಿ ರೈಲುಗಳು ಕರ್ನಾಟಕದೊಳಗೆ ಕೇವಲ 100 ಕಿ.ಮೀ. ಮಾತ್ರ ಓಡುತ್ತವೆ. ಇದರಿಂದ ರಾಜ್ಯಕ್ಕೆ ಇರುವ ಪ್ರಯೋಜನ ಸೀಮಿತವಾಗಿರಲಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು-ಪುಣೆ ನಡುವೆ ಹೈಸ್ಪೀಡ್ ರೈಲು ಓಡಿಸುವುದರಿಂದ ಮಧ್ಯ ಮತ್ತು ಉತ್ತರ ಕರ್ನಾಟಕ ಹಾಗೂ ಪಶ್ಚಿಮ ಮಹಾರಾಷ್ಟ್ರದ ಸಾಂಗಲಿ, ಕೊಲ್ಲಾಪುರ ಮುಂತಾದ ಜಿಲ್ಲೆಗಳಿಗೆ ಅಪಾರ ಲಾಭವಾಗಲಿದೆ. ಇದು ರಾಜ್ಯದ ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ತುಮಕೂರು ಮುಂತಾದ ಜಿಲ್ಲೆಗಳಲ್ಲಿ ಆರ್ಥಿಕ ಮತ್ತು ಔದ್ಯಮಿಕ ಚಿತ್ರಣವನ್ನೇ ಬದಲಿಸಲಿದೆ ಎಂದು ಅವರು ವಿವರಿಸಿದ್ದಾರೆ.

ಆದ್ದರಿಂದ ಬೆಂಗಳೂರು-ಮುಂಬೈ ನಡುವೆ ಹೈಸ್ಪೀಡ್ ರೈಲು ಯೋಜನೆ ಕುರಿತು ವಿಸ್ತೃತ ಕಾರ್ಯಸಾಧ್ಯತಾ ಅಧ್ಯಯನ ನಡೆಸಬೇಕು ಎಂದು ಪಾಟೀಲ ಅವರು ಪತ್ರದಲ್ಲಿ ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments