ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಶಾಲೆಗಳಿಗೆ ನೀಡಲಾಗಿದ್ದ ದಸರಾ ರಜೆಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರೈಸಲು ರಾಜ್ಯದ ಎಲ್ಲಾ ಶಿಕ್ಷಕರನ್ನು ಬಳಸಿಕೊಳ್ಳಲು ನಿರ್ಧರಿಸಿದೆ ಎಂದರು.
ರಾಜ್ಯದ ಹಲೆವೆಡೆ ಸಮೀಕ್ಷೆ ಪೂರ್ಣವಾಗಿ ನಡೆದಿಲ್ಲ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆಯಂತೆ ಸಮೀಕ್ಷೆ ನಡೆದಿಲ್ಲ. ಕೊಪ್ಪಳ ಜಿಲ್ಲೆಯಲ್ಲಿ ಶೇ.90ರಷ್ಟು ಸಮೀಕ್ಷೆ ಪೂರ್ಣವಾಗಿದೆ. ಎಂದು ಅವರು ಹೇಳಿದರು.
ಸೆ.22ರಿಂದ ಆರಂಭಗೊಂಡಿರುವ ಸಮೀಕ್ಷೆಯಲ್ಲಿ 1 ಲಕ್ಷ 20 ಸಾವಿ ಶಿಕ್ಷಕರು ಭಾಗಿಯಾಗಿದ್ದಾರೆ. 40 ಸಾವಿರ ಇತರರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಶಾಲಾ ಶಿಕ್ಷಕರು ಇನ್ನಷ್ಟು ದಿನ ನೀಡುವಂತೆ ಕೋರಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಯಲ್ಲಿ ತೊಡಗಿಸಿಕೊಂಡ ಶಿಕ್ಷಕರು ಸಮೀಕ್ಷೆಗಳಲ್ಲಿ ಪಾಲ್ಗೊಳ್ಳುವುದರಿಂದ ವಿನಾಯಿತಿ ನೀಡಲಾಗಿದೆ. ದ್ವಿತೀಯ ಪಿಯುಸಿ ಶಿಕ್ಷಕರು ಮಾತ್ರ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತಿಲ್ಲ. ಉಳಿದ ಎಲ್ಲಾ ಸರ್ಕಾರಿ ಶಿಕ್ಷಕರು ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡು ಸಮೀಕ್ಷೆ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಅವರು ವಿವರಿಸಿದರು.
ಒಂದು ದಿನಕ್ಕೆ 10ರಿಂದ 15 ಮನೆ ಸಮೀಕ್ಷೆ ಆಗಬೇಕು. ಈ ಹಿಂದೆ ಮನೆಗಳ ಗುರಿ ಕೂಡ ಕಡಿಮೆ ಮಾಡಲಾಗಿದೆ. ಇದರಿಂದ ಶಿಕ್ಷಕರು ಸಮೀಕ್ಷೆಯಲ್ಲಿ ಸರಳೀಕರಣ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಶಾಲೆಗಳಿಗೆ ರಜೆ ನೀಡಿದ್ದರಿಂದ ಶಿಕ್ಷಕರು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡರೆ ಅಕ್ಟೋಬರ್ 19ರೊಳಗೆ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದರು.



