Thursday, December 25, 2025
Google search engine
Homeರಾಜ್ಯBelagavi Session ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಮಧು ಬಂಗಾರಪ್ಪ

Belagavi Session ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಮಧು ಬಂಗಾರಪ್ಪ

ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಆಧಾರದ ಮೇಲೆ ಬಡ್ತಿ ನೀಡುವ ಪ್ರಕ್ರಿಯೆಯನ್ನು 2205 ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸೋಮವಾರ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ನ  ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಪ್ರೌಢಶಾಲಾ ಶಿಕ್ಷಕರ  ಒಂದೇ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಮತ್ತು ಪಟ್ಟಿ ಪ್ರಕಟಿಸಿದ ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.

ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡಬೇಕೆಂಬುದು ಪ್ರೌಢಶಾಲಾ ಸಹ ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದೆ. ಸಂಬಂಧಿಸಿದ ಇಲಾಖೆಯು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಂಕನೂರ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಈಗಾಗಲೇ 2013ನೇ ಸಾಲಿನವರೆಗೆ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ. ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ 2024ರ   ಫೆಬ್ರವರಿ ಮಾಹೆ ಮತ್ತು ಮಾರ್ಚ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪ್ರಾಥಮಿಕ ಮತ್ತು ಪ್ರೌಢ)ಯ ಆಯುಕ್ತರು ಹಾಗೂ ಏಪ್ರಿಲ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ  ( ಪದವಿ ಪೂರ್ವ) ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2024ರ ಅಕ್ಟೋಬರ್ 16ರಂದು ನೀಡಿರುವ ಅಭಿಪ್ರಾಯದನ್ವಯ ಶಾಲಾ ಶಿಕ್ಷಣ ಇಲಾಖೆಯ ನಾಲ್ಕು ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಸಹ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪರಿಶೀಲಿಸಿ ಸಾಮಾನ್ಯ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಲಾಗುವು ಎಂದರು.

ಅಂತಿಮ ರಾಜ್ಯಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲು ಕರ್ನಾಟಕ ಸರ್ಕಾರಿ ನೌಕರರ (ಜೇಷ್ಠತಾ) ನಿಯಮಗಳು 1957ರ ನಿಯಮ 7-ಎ ರ ನಿಯಮದನ್ವಯ ಪರಿಶೀಲಿಸಿ ಅಗತ್ಯ ಕ್ರಮವಹಿಸಲು 2024ರ ಅಕ್ಟೋಬರ್ ಮಾಹೆಯಲ್ಲಿ ಬರೆದ ಪತ್ರದಲ್ಲಿ ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ, ಧಾರವಾಡ ಮತ್ತು ಕಲಬುರಗಿಯ ಅಪರ ಆಯುಕ್ತರಿಗೆ ಹಾಗೂ ಪದವಿ ಪೂರ್ವ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದ್ದು, ಇದರನ್ವಯ ಪದೋನ್ನತಿ ಪ್ರಕ್ರಿಯೆಯನ್ನು ತ್ವರಿತವಾಗಿ ನಿಯಮಾನುಸಾರ ನಡೆಸಲು ಕ್ರಮ ವಹಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments