ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಸಂಪುಡ ಸಭೆಯಲ್ಲಿ ದುರಂತದ ಬಗ್ಗೆ ಸುಧೀರ್ಘ ಚರ್ಚೆ ನಡೆಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ ಎಂದು ಅವರು ನುಡಿದರು.
·ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ಅವರು ಹೇಳಿದರು.
ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ ಎಂದು ಅವರು ನುಡಿದರು.
ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.
ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.


