Home ರಾಜ್ಯ Karnataka ಪ್ರಧಾನಿ ಮುಂದೆ 5 ಪ್ರಮುಖ ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!

Karnataka ಪ್ರಧಾನಿ ಮುಂದೆ 5 ಪ್ರಮುಖ ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ದಿ ಹಾಗೂ ನೀರಾವರಿ ಯೋಜನೆ, ನಬಾರ್ಡ್ ಸಾಲ ಕಡಿತ, ಅನುದಾನ ಕಡಿತ ಸೇರಿದಂತೆ 5 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

by Editor
0 comments
kannadavahini karnataka cm meet pm modi

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ದಿ ಹಾಗೂ ನೀರಾವರಿ ಯೋಜನೆ, ನಬಾರ್ಡ್ ಸಾಲ ಕಡಿತ, ಅನುದಾನ ಕಡಿತ ಸೇರಿದಂತೆ 5 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

೩ ವಿಧಾನಸಭಾ ಕ್ಷೇತ್ರಗಳಲ್ಲಿ ಜಯ ಸಾಧಿಸಿದ ಬೆನ್ನಲ್ಲೇ ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಶುಕ್ರವಾರ ಬೆಳಿಗ್ಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ಬೇಡಿಕೆಗಳನ್ನು ಮಂಡಿಸಿದರು.

ಪ್ರಧಾನಿ ಮೋದಿಗೆ ಸಲ್ಲಿಸಿದ ಮನವಿ ಪತ್ರ ಯಥಾವತ್ತು ವಿವರ ಇಲ್ಲಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ,

banner

ರಾಜ್ಯಕ್ಕೆ ಅತ್ಯಂತ ಪ್ರಮುಖವಾದ ಕೆಲವು ವಿಷಯಗಳ ಬಗ್ಗೆ ತಮ್ಮ ಗಮನವನ್ನು ಸೆಳೆಯಲು ಬಯಸುತ್ತೇನೆ.

ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೆ ಒದಗಿಸಿರುವ ನಬಾರ್ಡ್ ನೆರವು ಕಡಿತಗೊಳಿಸಿರುವುದರಿಂದ  ರಾಜ್ಯದ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಿದೆ. 2023-24ರ ಸಾಲಿನಲ್ಲಿ ರೂ.5600 ಕೋಟಿಗಳನ್ನು ಮಂಜೂರು ಮಾಡಲಾಗಿತ್ತು. 2024 -25ರ ಸಾಲಿನಲ್ಲಿ ರೂ.  2,340 ಕೋಟಿಗಳನ್ನು ಮಂಜೂರು ಮಾಡಲಾಗಿದೆ. ಇದರಿಂದಾಗಿ ನಬಾರ್ಡ್ ನೆರವು ಪ್ರಸಕ್ತ ಸಾಲಿನಲ್ಲಿ ಶೇ.58 ರಷ್ಟು ಕಡಿತವಾಗಿದೆ.

1. ರಾಜ್ಯವು ಹೆಚ್ಚುವರಿ ಬಡ್ಡಿ ಸಹಾಯಧನವನ್ನು ನೀಡದ ಹೊರತು, ಇದು ರಾಜ್ಯದ ರೈತಾಪಿ ವರ್ಗದ  ಆರ್ಥಿಕ  ವೆಚ್ಚದ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೆ,  ರಾಜ್ಯದ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿದೆ.    ಆದ್ದರಿಂದ ಈ ಕೂಡಲೇ ಇದನ್ನು ಪರಾಮರ್ಶಿಸಿ ನಬಾರ್ಡ್ ನೆರವು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ.  ರಾಜ್ಯದ ರೈತರು ಅಲ್ಪಾವಧಿ ಬೆಳೆ ಸಾಲಗಳನ್ನು ಪಡೆಯಲು ಯಾವುದೇ ರೀತಿಯ ತೊಂದರೆಯಾಗದಂತೆ ತಾವು ಹಣಕಾಸು ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡುತ್ತಿದ್ದೇನೆ.

2.   ಈ ಮೊದಲೇ ತಮ್ಮಲ್ಲಿ ಮನವಿ ಮಾಡಿರುವಂತೆ, ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 2023-24 ರ ಕೇಂದ್ರ ಬಜೆಟ್ ನಲ್ಲಿ ಅನುಮೋದನೆ ಆಗಿರುವ ರೂ. 5300 ಕೋಟಿ ಅನುದಾನ ಬಿಡುಗಡೆ ಮಾಡುವ ಕೇಂದ್ರ ಹಣಕಾಸು ಸಚಿವರ ಭರವಸೆ ಈವರೆಗೆ ಈಡೇರಿಲ್ಲ. ತ್ವರಿತ ನೀರಾವರಿ ಲಾಭ ಕಾರ್ಯಕ್ರಮದಡಿ ನೆರವು ಒದಗಿಸಲು ಸಚಿವ ಸಂಪುಟದ ಟಿಪ್ಪಣಿ ಸಿದ್ದಮಾಡಿರುವ ಬಗ್ಗೆ ತಿಳಿದುಬಂದಿದೆ.

ಪ್ರಸಕ್ತ ಯೋಜನೆ ಶೀಘ್ರ ಅನುಮೋದನೆಗೊಂಡಲ್ಲಿ ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಒಳಪಡುವ ಮಧ್ಯ ಕರ್ನಾಟಕದ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ. ಆದ್ದರಿಂದ  ಈ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡಲು ತಮ್ಮಲ್ಲಿ ಮನವಿ ಮಾಡುತ್ತೇನೆ.

3.  ಶುಷ್ಕ ವಲಯಕ್ಕೆ ಸೇರಿದ ಕರ್ನಾಟಕದಂತಹ ರಾಜ್ಯದಲ್ಲಿ ನೀರಾವರಿ ಸೌಲಭ್ಯ ಸಾಮರ್ಥ್ಯಗಳನ್ನು ಸಬಲಗೊಳಿಸುವುದು ಅತ್ಯಗತ್ಯವಾಗಿದ್ದು, ಬಹುತೇಕ ರಾಜ್ಯವು ತನ್ನ ಸಂಪನ್ಮೂಲಗಳಿಂದಲೇ ಭರಿಸುತ್ತಿದೆ. ಆದರೆ, ಜಲ ಶಕ್ತಿ ಸಚಿವಾಲಯ ಹಾಗೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಗಳಲ್ಲಿ ಯೋಜನೆಗಳ ತೀರುವಳಿ ಬಾಕಿ ಇರುವುದು ನಮ್ಮ ಯೋಜನೆಗಳನ್ನು ವಿಳಂಬ ಮಾಡಿದೆ.

ಕಾವೇರಿ ನದಿ ಪಾತ್ರದ ಮೇಕೇದಾಟು ಯೋಜನೆ ಹಾಗೂ ಮಹದಾಯಿ ನದಿಯ ಕಳಸಾಬಂಡೂರಿ ಯೋಜನೆಗಳಗತ್ತ ತಾವು ತುರ್ತು ಗಮನ ಹರಿಸಬೇಕಿದೆ. ಜಲಶಕ್ತಿ ಹಾಗೂ ಅರಣ್ಯ, ಪರಿಸರ ಸಚಿವಾಲಯಗಳಿಂದ ಶೀಘ್ರ  ತೀರುವಳಿ  ದೊರಕಿಸಿಕೊಡಲು ಕೋರಲಾಗಿದೆ.

4. ಕರ್ನಾಟಕ ಅತ್ಯಂತ ವೇಗವಾಗಿ ನಗರೀಕರಣಗೊಳ್ಳುತ್ತಿರುವ ರಾಜ್ಯವಾಗಿದ್ದು, 13 ಮಹಾನಗರ ಪಾಲಿಕೆಗಳಿದ್ದು, ಈ ಎರಡನೇ ಸ್ತರದ ನಗರಗಳ ಅಭಿವೃದ್ಧಿಗೆ ಹೆಚ್ಚಿನ ಬಂಡವಾಳ ಅಗತ್ಯವಿದೆ. ಕರ್ನಾಟಕ ರಾಜ್ಯ ಸರ್ಕಾರ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಮುಂದಿನ ಮೂರು ವರ್ಷಗಳ ಅವಧಿಗೆ 2ಸಾವಿರ ಕೋಟಿ ರೂ. ಈ ಉದ್ದೇಶಕ್ಕಾಗಿ ತೆಗೆದಿರಿಸಿದೆ. ಆದರೆ ಈ ನಗರಗಳಿಗೆ ಸಮಗ್ರ ಮೂಲಸೌಕರ್ಯಗಳನ್ನು ಕಲ್ಪಿಸಲು ಈ ಅನುದಾನ ಸಾಕಾಗುವುದಿಲ್ಲ. ಆದ್ದರಿಂದ ಅಮೃತ್ ಅಥವಾ ಇನ್ನಾವುದೇ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ 10ಸಾವಿರ ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಲು ನಾನು ಕೋರುತ್ತೇನೆ.

5. 15ನೇ ಹಣಕಾಸು ಆಯೋಗ ಕರ್ನಾಟಕ ರಾಜ್ಯಕ್ಕೆ ಸರಿಯಾದ ನ್ಯಾಯ ಒದಗಿಸುತ್ತಿಲ್ಲ ಎಂದು ನಾವು ನಿರಂತರವಾಗಿ ಪ್ರಸ್ತಾಪಿಸುತ್ತಾ ಬಂದಿದ್ದೇವೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯದ ಪಾಲನ್ನು ಶೇ.1ರಷ್ಟು ಕಡಿಮೆ ಮಾಡಿರುವ ಶಿಫಾರಸ್ಸನ್ನು ಹಣಕಾಸು ಇಲಾಖೆ ಸರಿಪಡಿಸಬೇಕಾಗಿದೆ. ಹಣಕಾಸು ಆಯೋಗವು ರಾಜ್ಯಕ್ಕೆ ಹಂಚಿಕೆ ಕಡಿಮೆಯಾಗಿರುವುದಕ್ಕೆ ಪರಿಹಾರವಾಗಿ 5495 ಕೋಟಿ ರೂ. ಅನುದಾನ ಬಿಡುಗಡೆಗೆ ಮತ್ತು ಪೆರಿಫೆರಲ್ ರಿಂಗ್ ರಸ್ತೆ ಮತ್ತು ನೀರಿನ ಮೂಲಗಳ ಪುನರುಜ್ಜೀವನಕ್ಕೆ 6 ಸಾವಿರ ಕೋಟಿ ರೂ. ವಿಶೇಷ ಅನುದಾನ ನೀಡುವ ಬಗ್ಗೆ ಶಿಫಾರಸು ಮಾಡಿದೆ. ಕನಿಷ್ಠ ಪಕ್ಷ ಹಣಕಾಸು ಆಯೋಗ ಈ ಎರಡು ಶಿಫಾರಸ್ಸುಗಳನ್ನು ಒಪ್ಪಿಕೊಳ್ಳಬೇಕಾಗಿದೆ. ನಾವು ಇನ್ನೂ 15ನೇ ಹಣಕಾಸು ಆಯೋಗದ ಅವಧಿಯಲ್ಲಿರುವುದರಿಂದ ರಾಜ್ಯಕ್ಕೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ನಿರ್ದೇಶನ ನೀಡುವಂತೆ ಪುನಃ ನಾನು ಮನವಿ ಮಾಡುತ್ತೇನೆ.

16ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇಂದ್ರದ ತೆರಿಗೆ ಪಾಲಿಗೆ ಹೆಚ್ಚಿನ ದೇಣಿಗೆ ಒದಗಿಸುವ ರಾಜ್ಯಗಳಿಗೆ, ಕೇಂದ್ರದ ತೆರಿಗೆ ಪಾಲಿನಲ್ಲಿ ಭಾರೀ ಕಡಿತ ಮಾಡಿ ಶಿಕ್ಷಿಸದಂತೆ, ಹಣಕಾಸು ಇಲಾಖೆ ಖಾತ್ರಿಪಡಿಸಬೇಕು.

ನಮ್ಮ ಮನವಿಗೆ ಸೂಕ್ತ ಪ್ರತಿಕ್ರಿಯೆ ದೊರಕುವ ನಿರೀಕ್ಷೆ ನಮ್ಮದು.

ಸಿದ್ದರಾಮಯ್ಯ

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಚಂದ್ರಶೇಖರ್ ಸ್ವಾಮೀಜಿಗೆ ಸಂಕಷ್ಟ: ಡಿ.2ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ! ಒಕ್ಕಲಿಗ ಸ್ವಾಮೀಜಿ ಮುಟ್ಟಿದರೆ ಸಮುದಾಯ ತಿರುಗಿ ಬೀಳಲಿದೆ: ಆರ್.ಅಶೋಕ ಎಚ್ಚರಿಕೆ ಅದಾನಿ ಬಂಧನಕ್ಕೆ ಅಮೆರಿಕದಿಂದ ಮನವಿ ಬಂದಿಲ್ಲ: ಕೇಂದ್ರ ಸರ್ಕಾರ Belagavi ಲವ್ ಸೆಕ್ಸ್ ಧೋಖಾ: ಮಹಿಳಾ ಹೋರಾಟಗಾರ್ತಿಗೆ ವಂಚಿಸಿದ ಯೋಧ! Karnataka ಪ್ರಧಾನಿ ಮುಂದೆ 5 ಪ್ರಮುಖ ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ! ಲಂಚ ಕೊಡದಿದ್ದರೆ ಹೆರಿಗೆನೂ ಇಲ್ಲ, ತಾಯಿ ಕಾರ್ಡ್ ಕೊಡಲ್ಲ: ಲೋಕಾಯುಕ್ತ ದಾಳಿ ವೇಳೆ ಕೆಸಿ ಜನರಲ್ ಆಸ್ಪತ್ರೆಯ ರೋಗಿಗಳ ಅಳ... ಜಿಮ್ ಮಾಡುವಾಗಲೇ ಜೀವ ತೆತ್ತ 28 ವರ್ಷದ ಪ್ರಶಸ್ತಿ ವಿಜೇತ ಬಾಡಿಬಿಲ್ಡರ್! 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು: ರಾಹುಲ್, ಪ್ರಿಯಾಂಕಾ ಅಭಿನಂದನೆ RCB ಆರ್ ಸಿಬಿ ನಾಯಕ ಯಾರು? ಬಹಿರಂಗಪಡಿಸಿದ ಎಬಿ ಡಿವಿಲಿಯರ್ಸ್! cricket ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತದಿಂದ ಆಟಗಾರ ಮೈದಾನದಲ್ಲೇ ಸಾವು!