ಜಿಡಿಪಿಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು.
ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದರು.
ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗಧಿ ಮಾಡ್ತಾರೆ. ಇದೇ ಅಧಿಕಾರ ನಮ್ಮ ರೈತರಿಗೂ ಸಿಗಬೇಕು ಎಂದು ಅವರು ಹೇಳಿದರು.
ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.
ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯ ಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಅಂದರೆ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದ್ದೇವೆ ಎಂದು ಲೆಕ್ಕ ವಿವರಿಸಿದರು.
ನಾವು ಒಂದು ಕಡೆ ರೈತರಿಗೆ ಶಕ್ತಿ ತುಂಬುತ್ತಿದ್ದೇವೆ. ಮತ್ತೊಂದು ಕಡೆ ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಎಸಗುತ್ತಿದೆ. ರಾಜ್ಯದ ರೈತರಿಗೆ ನಬಾರ್ಡ್ ನಿಂದ ಕೊಡುವ ಸಬ್ಸಿಡಿ ಸಾಲದ ಪ್ರಮಾಣವನ್ನು ಶೇ58 ರಷ್ಟು ಕಡಿತಗೊಳಿಸಿದೆ. ಬರೀ ಭಾಷಣ ಮಾಡಿದರೆ ರೈತರ ಬದುಕು ಉದ್ದಾರ ಆಗಲ್ಲ ಎಂದು ಬಿಜೆಪಿಯ ಭಾಷಣದ ನೀತಿಯನ್ನು ಟೀಕಿಸಿದರು.