ಕೋವಿಡ್ 19 ಸಂದರ್ಭದ ಖರೀದಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ಹಗರಣಗಳ ತನಿಖೆಗೆ ನೇಮಿಸಲಾಗಿದ್ದ ತನಿಖಾ ಆಯೋಗದ ಆಯುಕ್ತ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೇಲ್ ಡಿ ಕುನ್ಹಾ 1808 ಪುಟಗಳ ಎರಡನೇ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಟ್ಟು 7 ಸಂಪುಟಗಳ ಮಧ್ಯಂತರ ವರದಿ ಸಲ್ಲಿಸಲಾಗಿದ್ದು, ಇದರಲ್ಲಿ ನಾಲ್ಕು ಸಂಪುಟಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದ ಹಗರಣ ಮತ್ತು ಅವ್ಯವಹಾರಗಳದ್ದಾಗಿವೆ.
ಬಿಬಿಎಂಪಿಯ ಬೊಮ್ಮನಹಳ್ಳಿ ವಲಯ, ದಕ್ಷಿಣ ವಲಯ, ಪಶ್ಚಿಮ ವಲಯ, ಯಲಹಂಕ ವಲಯಗಳ ಹಗರಣಗಳಿಗೆ ಸಂಬಂಧಪಟ್ಟ ವಿವರಗಳು ಪ್ರತ್ಯೇಕ ಪ್ರತ್ಯೇಕ ಸಂಪುಟಗಳಲ್ಲಿವೆ.
ಉಳಿದ ಮೂರು ಸಂಪುಟಗಳು ಬೆಂಗಳೂರು ನಗರ ಜಿಲ್ಲೆ, ಗ್ರಾಮಾಂತರ ಜಿಲ್ಲೆ ಮತ್ತು ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಹಗರಣಗಳದ್ದಾಗಿವೆ.
ತನಿಖೆಯ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಪ್ಪಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


