ಧರ್ಮಸ್ಥಳದಲ್ಲಿ ಅನೇಕ ಶವಗಳನ್ನು ಹೂತು ಹಾಕಿರುವ ಪ್ರಕರಣದ ಬಗ್ಗೆ ಸಮಗ್ರ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿರುವ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ಆದೇಶವನ್ನು ಸ್ವಾಗತಿಸಿದೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂತು ಹಾಕಿರುವ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಭಾನುವಾರ ಎಸ್ ಐಟಿ ರಚನೆ ಮಾಡಿದ್ದು, ಸಮಗ್ರ ತನಿಖೆ ನಡೆಸಿ ಶೀಘ್ರವೇ ವರದಿ ನೀಡುವಂತೆ ಸೂಚನೆ ನೀಡಿತ್ತು.
ರಾಜ್ಯ ಸರ್ಕಾರದ ಆದೇಶದ ಬೆನ್ನಲ್ಲೆ ಶ್ರೀ ಕ್ಷೇತ್ರ ಧರ್ಮಸ್ಥಳ ವಕ್ತಾರ ಕೆ. ಪಾರ್ಶ್ವನಾಥ್ ಜೈನ್ ಸರಕಾರದ ಆದೇಶವನ್ನು ಸ್ವಾಗತಿಸಿದ್ದು, ಶೀಘ್ರ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ವರದಿ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದಾರೆ.
ಧರ್ಮಸ್ಥಳದ ಹೇಳಿಕೆ ಹೀಗಿದೆ.
ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ “ಹಲವಾರು ಶವಗಳನ್ನು ಹೂತಿದ್ದೆ” ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.) ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ.
ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ “ಸತ್ಯ” ಆದ್ದರಿಂದ, ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ.
ಕೆ. ಪಾರ್ಶ್ವನಾಥ್ ಜೈನ್, ವಕ್ತಾರರು, ಶ್ರೀ ಕ್ಷೇತ್ರ ಧರ್ಮಸ್ಥಳ


